ಧಾರ್ಮಿಕ ಕೇಂದ್ರಗಳ ತೆರವು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿ: ಹೈಕೋರ್ಟ್

ಬೆಂಗಳೂರು, ಜು.2: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಾಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸೆ.29 ರೊಳಗೆ ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಕುರಿತು ಅಗ್ರಹಾರ ದಾಸರಹಳ್ಳಿ ನಿವಾಸಿ ಎಸ್.ರವಿಚಂದ್ರ ಹಾಗೂ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಸುಪ್ರೀಂಕೋರ್ಟ್ ನಿರ್ದೇಶನದಂತೆ ಸಾರ್ವಜನಿಕ ಸ್ಥಳ, ಸಾರ್ವಜನಿಕ ಪಾರ್ಕ್‌ಗಳಲ್ಲಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಾಣ ಮಾಡಬಾರದು. ಆದರೆ, ಅಗ್ರಹಾರ ದಾಸರಹಳ್ಳಿಯಲ್ಲಿ ಸಾರ್ವಜನಿಕ ಪಾರ್ಕ್‌ನಲ್ಲಿಯೆ ಕಾನೂನು ಬಾಹಿರವಾಗಿ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದಾರೆ ಎಂದು ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು.
ಅರ್ಜಿದಾರರ ಪರ ವಾದಿಸಿದ ವಕೀಲ ಎನ್.ಪಿ.ಅಮೃತೇಶ್ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಾಣ ಮಾಡಬೇಕಾದರೆ, ರಾಜಕೀಯ ಪ್ರಭಾವಿಗಳ ಬೆಂಬಲವಿರುತ್ತದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಾನೂನು ಬಾಹಿರವಾಗಿ ನಿರ್ಮಾಣವಾಗಿರುವ ಎಷ್ಟು ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ. ಕಾನೂನು ಬಾಹಿರವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳು ಎಷ್ಟು ಇವೆ ಎಂಬುದರ ಕುರಿತು ಮಾಹಿತಿ ನೀಡಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ಅಡ್ವೊಕೇಟ್ ಜನರಲ್ ಉದಯ ಹೊಳ್ಳ ಅವರು ವಾದಿಸಿ, ರಾಜ್ಯದಲ್ಲಿ ಕಾನೂನು ಬಾಹಿರವಾಗಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಾಣ ಮಾಡಿರುವ ಕುರಿತು ಸೆ.15 ರೊಳಗಾಗಿ ಕೋರ್ಟ್‌ಗೆ ವರದಿ ಸಲ್ಲಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಸೆ.29ಕ್ಕೆ ಮುಂದೂಡಿತು.
2006ರ ಸುಪ್ರೀಂಕೋರ್ಟ್ ಆದೇಶದಲ್ಲೇನಿದೆ: ಸಾರ್ವಜನಿಕ ಸ್ಥಳಗಳಲ್ಲಿ ಮಸೀದಿ, ದೇವಸ್ಥಾನ, ಚರ್ಚ್ ಹಾಗೂ ಗುರುದ್ವಾರ ಸೇರಿದಂತೆ ಅನಧಿಕೃತವಾಗಿ ಯಾವುದೇ ರೀತಿಯ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ನಿರ್ಮಿಸಬಾರದು. ನಿರ್ಮಿಸಿದರೆ ಅವುಗಳನ್ನು ತೆರವುಗೊಳಿಸಬೇಕು. 2006ರಲ್ಲಿ ಸಲ್ಲಿಸಲಾಗಿದ್ದ ಪಿಐಎಲ್ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.







