ಸ್ಥಳೀಯ ಭಾಷೆಯಲ್ಲೆ ಬ್ಯಾಂಕಿಂಗ್ ಪರೀಕ್ಷೆಗೆ ಅವಕಾಶ: ಕೇಂದ್ರ ಸಚಿವೆಗೆ ಅಭಿನಂದನೆ ಸಲ್ಲಿಸಿದ ಸಿಎಂ

ಬೆಂಗಳೂರು, ಜು. 4: ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿದ ಕೇಂದ್ರ ಸರಕಾರದ ಕ್ರಮವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವಾಗತಿಸಿದ್ದು, ಕೇಂದ್ರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರಾದೇಶಿಕ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವುದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ರನ್ನು ಭೇಟಿಯಾಗಿದ್ದ ಸಿಎಂ ಕುಮಾರಸ್ವಾಮಿ, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಭಾಷಾಜ್ಞಾನ ಹೊಂದಿರುವವರಿಗೆ ಅವಕಾಶ ಒದಗಿಸುವಂತೆ ಐಬಿಪಿಎಸ್ ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಮನವಿ ಮಾಡಿದರು.
ಚಂದ್ರಶೇಖರ್ ಅಭಿನಂದನೆ: ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಈ ಹಿಂದೆಯೇ ಬ್ಯಾಂಕಿಂಗ್ ಪರೀಕ್ಷೆ ಸ್ಥಳೀಯ ಭಾಷೆಯಲ್ಲೆ ನಡೆಸಬೇಕೆಂದು ಸಂಸತ್‌ನಲ್ಲೇ ಆಗ್ರಹಿಸಿದ್ದರು. ಇದೀಗ ಕೇಂದ್ರ ಸ್ಥಳೀಯ ಭಾಷೆಯಲ್ಲೆ ಬ್ಯಾಂಕಿಂಗ್ ಪರೀಕ್ಷೆಗೆ ಅವಕಾಶ ಕಲ್ಪಿಸಿರುವುದು ಅಭಿನಂದನೀಯ ಎಂದು ತಿಳಿಸಿದ್ದಾರೆ.
ದಿಲ್ಲಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ನೀಡಿದೆ. ಅಲ್ಲದೆ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲು ಕೇಂದ್ರ ಸರಕಾರ ಆಸ್ಥೆ ವಹಿಸಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ ಎಂದು ಇದೇ ವೇಳೆ ಹೇಳಿದರು.







