ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಶಿವಮೊಗ್ಗ, ಜು. 5: ತೀವ್ರ ಅಸ್ವಸ್ಥಗೊಂಡು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಕಾಗೋಡುರವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಈ ಹಿನ್ನೆಲೆ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ವಿಶೇಷ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಸದ್ಯ ಚಿಕಿತ್ಸೆ ಸ್ಪಂದಿಸಿದ್ದು ಅರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ತಿಮ್ಮಪ್ಪನವರನ್ನ ಬೆಂಗಳೂರಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.
ಇನ್ನು ಆಸ್ಪತ್ರೆಗೆ ಭೇಟಿ ನೀಡಿದ ಅಳಿಯ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಎಸ್ಪಿ ಡಾ.ಅಶ್ವಿನಿ, ಡಿಎಚ್ಒ ಡಾ.ರಾಜೇಶ್ ಸುರಗಿಹಳ್ಳಿ ಮತ್ತಿತರ ಪ್ರಮುಖರು ಕಾಗೋಡು ಅವರ ಆರೋಗ್ಯ ವಿಚಾರಿಸಿದರು. ಕಾಗೋಡು ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.