ಶೀಘ್ರದಲ್ಲಿ ನೂತನ ಶಿಕ್ಷಣ ನೀತಿ: ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ, ಜು.5: ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಜಗತ್ತಿನ ಅತ್ಯುತ್ತಮ ಶಿಕ್ಷಣ ವ್ಯವಸ್ಥೆಗಳ ಸಾಲಿನಲ್ಲಿ ನಿಲ್ಲಿಸಲು ಶೀಘ್ರದಲ್ಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಶುಕ್ರವಾರ ಎನ್ಡಿಎ ಸರಕಾರದ ಎರಡನೇ ಅವಧಿಯ ಮೊದಲ ಬಜೆಟ್ ಮಂಡಿಸಿದ ಸೀತಾರಾಮನ್, ಜಾಗತಿಕ ಮಟ್ಟದ ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಲು ಕೇಂದ್ರ ಸರಕಾರ 400 ಕೋಟಿ ರೂ. ಮೀಸಲಿಟ್ಟಿದೆ ಎಂದರು ಮತ್ತು ವಿದೇಶಿ ವಿದ್ಯಾರ್ಥಿಗಳನ್ನು ಆಕರ್ಷಿಸುವ ಉದ್ದೇಶದಿಂದ ಸ್ಟಡಿ ಇನ್ ಇಂಡಿಯಾ ಕಾರ್ಯಕ್ರಮವನ್ನು ಘೋಷಿಸಿದರು. ನೂತನ ಶಿಕ್ಷಣ ನೀತಿಯಲ್ಲಿ, ಶಾಲಾ ಮತ್ತು ಉನ್ನತ ಶಿಕ್ಷಣದಲ್ಲಿ ಪ್ರಮುಖ ಬದಲಾವಣೆ, ಆಡಳಿತದಲ್ಲಿ ಸುಧಾರಣೆ ಮತ್ತು ಸಂಶೋಧನೆ ಮತ್ತು ಅನ್ವೇಷಣೆಗೆ ಹೆಚ್ಚಿನ ಒತ್ತು ನೀಡಲಾಗುವುದು.
ದೇಶದಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಮತ್ತು ಸಮನ್ವಯಗೊಳಿಸಲು ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ (ಎನ್ಆರ್ಎಫ್)ವನ್ನು ರಚಿಸಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ.