ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೃಹತ್ ಪ್ರತಿಭಟನೆ

ಉಡುಪಿ, ಜು.9: ‘ಪ್ರಾಥಮಿಕ ಶಾಲೆಗಳ ಪದವೀಧರ ಶಿಕ್ಷಕ’ರ ವಿಷಯವೂ ಸೇರಿದಂತೆ ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಂಘದ ನಿರ್ದೇಶನದಂತೆ ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮಂಗಳವಾರ ತರಗತಿಗಳನ್ನು ಬಹಿಷ್ಕರಿಸಿ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃತ್ ಪ್ರತಿಭಟನೆಯನ್ನು ನಡೆಸಿದರು.
ಜಿಲ್ಲೆಯ ಮೂಲೆ ಮೂಲೆಗಳಿಂದ ನೂರಾರು ಸಂಖ್ಯೆಯ ಸರಕಾರಿ ಶಾಲಾ ಶಿಕ್ಷಕರನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ರವೀಂದ್ರ ಹೆಗ್ಡೆ, ಇಲಾಖೆ ನಿರ್ದೇಶಕರ ಮೇ 13ರ ಟಿಪ್ಪಣಿಯಂತೆ 2014ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರುಗಳನ್ನು 1ರಿಂದ 5ನೇ ತರಗತಿಗಳಿಗೆ ಸೀಮಿತಗೊಳಿಸಿದ ಆದೇಶವನ್ನು ತಕ್ಷಣ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೇ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ‘ಪದವೀಧರ ಶಿಕ್ಷಕ’ರೆಂದು ಪರಿಗಣಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿ ಗೊಳಿಸಬೇಕು. ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಪ್ರಾರಂಭಿಸಬೇಕೆಂದು ಅವರು ಒತ್ತಾಯಿಸಿದರು.
ನೂತನ ಪಿಂಚಣಿ ಯೋಜನೆ(ಎನ್‌ಪಿಎಸ್)ಯನ್ನು ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ(ಒಪಿಎಸ್)ಯನ್ನೇ ಮುಂದುವರಿಸಬೇಕು. ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಆಗದೇ ಇರುವುದರಿಂದ ಈಗ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಈ ಪ್ರಕ್ರಿಯೆ ಮುಗಿದ ತಕ್ಷಣ ಅಕ್ಟೋಬರ್ ತಿಂಗಳಲ್ಲಿ ಮತ್ತೊಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸ ಬೇಕು ಎಂಬುದು ಸಂಘದ ಬೇಡಿಕೆಯಾಗಿದೆ ಎಂದವರು ನುಡಿದರು.
ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಿ ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು, ಶಿಕ್ಷಕ ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯೋಪಾಧ್ಯಾಯ, ದೈಹಿಕ ಶಿಕ್ಷಕರುಗಳನ್ನು ಹೊರತುಪಡಿಸಿ ಹೆಚ್ಚುವರಿ ಪ್ರಕ್ರಿಯೆ ಆರಂಭಿಸ ಬೇಕು. 6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸ್ಸಿನ ಪ್ರಕಾರ ಮುಖ್ಯ ಗುರುಗಳಿಗೆ ಬಡ್ತಿಗಳನ್ನು ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪನಿರ್ದೇಶಕ ಹುದ್ದೆಯವರೆಗೂ ಬಡ್ತಿಯನ್ನು ನೀಡಬೇಕು ಎಂಬುದು ರಾಜ್ಯದ ಸರಕಾರಿ ಪ್ರಾಥಮಿಕ ಶಾಾ ಶಿಕ್ಷಕರ ಬೇಡಿಕೆಯಾಗಿದೆ ಎಂದರು.
ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಹಾಗೂ ಡಿಡಿಪಿಐ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾ ಯಿತು. ತಮ್ಮ ಈ ಮನವಿಗೆ ಸರಕಾರ ಸೂಕ್ತವಾಗಿ ಸ್ಪಂಧಿಸದಿದ್ದರೆ ಮೂರನೇ ಹಂತವಾಗಿ ಸೆ.5ರಂದು ಶಿಕ್ಷಕರ ದಿನಾಚರಣೆ ಯನ್ನು ಬಹಿಷ್ಕರಿಸಿ ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
ಸುರಿಯುವ ಮಳೆಯ ನಡುವೆ ನಡೆದ ಇಂದಿನ ಧರಣಿ, ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ಬಿ.ಬಿ., ಕುಂದಾಪುರ ವಲಯ ಅಧ್ಯಕ್ಷ ಸಖಾರಾಮ ಶೆಟ್ಟಿ, ಬೈಂದೂರು ವಲಯದ ವಿಶ್ವನಾಥ ಪೂಜಾರಿ, ಕಾರ್ಕಳ ವಲಯದ ಕೃಷ್ಣ ಮೊಯ್ಲಿ, ಉಡುಪಿ ವಲಯದ ಮಂಗಳಾ ಶೆಟ್ಟಿ, ಬ್ರಹ್ಮಾವರ ವಲಯದ ದಿನಕರ ಶೆಟ್ಟಿ, ಉಡುಪಿ ಜಿಲ್ಲಾ ಪ.ಜಾ., ಪ.ಪಂಗ ಶಿಕ್ಷಕರ ಸಂಘದ ಅಧ್ಯಕ್ಷ ಸುಂದರ ಮಾಸ್ತರ್, ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸೂರಪ್ಪ ಹೆಗ್ಡೆ, ಪದವೀಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವಿ ಎಸ್.ಪೂಜಾರಿ, ಗೌರವಾಧ್ಯಕ್ಷ ಪ್ರಶಾಂತ್ ಶೆಟ್ಟಿ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮುಂತಾದವರು ಉಪಸ್ಥಿತರಿದ್ದರು.











