ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ಮುಖಂಡರ ಸಮಾಲೋಚನೆ

ಬೆಂಗಳೂರು, ಜು. 24: ಮೈತ್ರಿ ಮುಂದುವರಿಕೆ, ವಿಪಕ್ಷ ನಾಯಕನ ಆಯ್ಕೆ, ಅತೃಪ್ತ ಶಾಸಕರ ವಿರುದ್ಧ ಅನರ್ಹತೆ ಕ್ರಮಕ್ಕೆ ಒತ್ತಾಯ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ಮುಖಂಡರು ಸಭೆ ನಡೆಸಿದರು.
ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ಕೃಷ್ಣಬೈರೇಗೌಡ, ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಎಚ್.ಕೆ.ಪಾಟೀಲ್, ಎಸ್.ಆರ್.ಪಾಟೀಲ್, ಪರಿಷತ್ ಸದಸ್ಯ ನಸೀರ್ ಅಹ್ಮದ್ ಸೇರಿ ಇನ್ನಿತರರು ಪಾಲ್ಗೊಂಡಿದ್ದರು.
ಬಿಎಸ್‌ವೈ ಬಹುಮತ ಸಾಬೀತುಪಡಿಸಬೇಕಿದೆ: ‘ರಾಜ್ಯದಲ್ಲಿ ನೂತನ ಸರಕಾರ ರಚನೆ ಉಮೇದಿನಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮುಖಂಡರ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅತೃಪ್ತರ ಬಗ್ಗೆ ಪಕ್ಷದ ಮುಖಂಡರ ಸಭೆಯಲ್ಲಿ ಚರ್ಚೆ ಮಾಡಿದ್ದು, ಅವರ ಮೇಲೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಅನರ್ಹಗೊಳ್ಳಲಿದ್ದು, ಕಾನೂನು ಕ್ರಮ ಆಗಲೇಬೇಕು ಎಂದು ಪ್ರತಿಪಾದಿಸಿದರು.
ಅತೃಪ್ತರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಎಲ್ಲ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಇದು ಮುಂದಿನ ದಿನಗಳಲ್ಲಿ ರಾಜೀನಾಮೆ ನೀಡುವವರಿಗೆ ಪಾಠ ಆಗಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ನಾಯಕರೆಲ್ಲರೂ ಐಕ್ಯತೆಯಿಂದ ಮುನ್ನಡೆಯಲು ತೀರ್ಮಾನಿಸಿದ್ದೇವೆ. ಜೆಡಿಎಸ್ ಜತೆ ಮೈತ್ರಿ ಮುಂದುವರಿಸುವ ಸಂಬಂಧ ಹೈಕಮಾಂಡ್ ತೀರ್ಮಾನಿಸಲಿದೆ. ಅಲ್ಲದೆ, ವಿಪಕ್ಷ ನಾಯಕ ಸ್ಥಾನದ ಬಗ್ಗೆಯೂ ಇನ್ನೂ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.







