ಮಂಗಳೂರು: ಶಕ್ತಿ ವಸತಿ ಶಾಲೆಯಲ್ಲಿ ಕಾರ್ಗಿಲ್ ವಿಜಯೋತ್ಸವ

ಮಂಗಳೂರು, ಜು.27: ನಗರದ ಶಕ್ತಿನಗರದ ವಸತಿ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಶುಕ್ರವಾರ ಕಾರ್ಗಿಲ್ ವಿಜಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪೂರ್ವಾಹ್ನ ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಕದ್ರಿಯಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.
ಆನಂತರ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಹಿಮಪರ್ವತಗಳ ನಡುವೆ ಭಾರತೀಯ ಸೈನಿಕರು ಪಾಕಿಸ್ತಾನದ ಸೈನಿಕರನ್ನು ಹಿಮ್ಮೆಟ್ಟಿಸಿ, ತಾಯ್ನಿಡಿಗೆ ಗೆಲುವು ತಂದುಕೊಟ್ಟ ಪರಿಯನ್ನು ಸಾಕ್ಷಚಿತ್ರ ಸಮೇತ ಎಳೆಎಳೆಯಾಗಿ ವಿವರಿಸಿದರು. ಮಕ್ಕಳ ಕುತೂಹಲಭರಿತ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಭಾರತೀಯರು ದೇಶ ಭಕ್ತಿಯೊಂದಿಗೆ ಸ್ವದೇಶಿ ಚಿಂತನೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ಶಕ್ತಿ ನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ ನಾಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಕ್ತಿ ಎಜ್ಯುಕೇಶನ್ ಟ್ರಸ್ಟಿನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮಾಬಾನು, ಶಕ್ತಿ ಪಿಯು ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್. ಉಪಸ್ಥಿತರಿದ್ದರು.
ವಿದ್ಯಾರ್ಥಿ ನಯನ್ ರಾಜಪ್ಪ ಕಾರ್ಗಿಲ್ ಯುದ್ಧದ ಚಿತ್ರಣವನ್ನು ಶಾಲಾ ವಿದ್ಯಾರ್ಥಿಗಳಿಗೆ ಪ್ರಸ್ತುತ ಪಡಿಸಿದರು. ವಿದ್ಯಾರ್ಥಿ ಚಿರಂತನ ಸ್ವಾಗತಿಸಿದರು. ಚಿನ್ಮಯಿ ಭಟ್ ಕಾರ್ಯಕ್ರಮ ನಿರೂಪಿಸಿದರು. ರಕ್ಷಣ್ ಬಿ. ನಾಕ್ ವಂದಿಸಿದರು.







