ವಿಪಕ್ಷವಾಗಿ ಸಕ್ರಿಯ ಕೆಲಸ ಮಾಡೋಣ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ
![ವಿಪಕ್ಷವಾಗಿ ಸಕ್ರಿಯ ಕೆಲಸ ಮಾಡೋಣ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ವಿಪಕ್ಷವಾಗಿ ಸಕ್ರಿಯ ಕೆಲಸ ಮಾಡೋಣ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ](https://www.varthabharati.in/sites/default/files/images/articles/2019/07/29/202877-1564421452.jpg)
ಬೆಂಗಳೂರು, ಜು.29: ಮಿತ್ರ ಪಕ್ಷ ಜೆಡಿಎಸ್ ನಿಲುವು ಏನೇ ಇರಲಿ, ನಾವು ಮಾತ್ರ ವಿರೋಧ ಪಕ್ಷವಾಗಿ ಆಡಳಿತರೂಢ ಬಿಜೆಪಿಯ ವೈಫಲ್ಯಗಳನ್ನು ಎಳೆ ಎಳೆಯಾಗಿ ಎತ್ತಿ ತೋರಿಸಿ ಸಕ್ರಿಯವಾಗಿ ಕೆಲಸ ಮಾಡೋಣ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸೋಮವಾರ ವಿಧಾನಸೌಧದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಶಾಸಕರ ಅನರ್ಹತೆಯಿಂದಾಗಿ ಎದುರಾಗಲಿರುವ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ, ಇಂದಿನಿಂದಲೇ ಅದಕ್ಕೆ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲು ನಿರ್ಧರಿಸಲಾಗಿದೆ.
ಮೈತ್ರಿ ಸರಕಾರ ಪತನಕ್ಕೆ ಕಾರಣವಾಗಿರುವ ಅತೃಪ್ತರಿಗೆ ಸೆಡ್ಡು ಹೊಡೆಯಲು ಅವರ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ತಕ್ಕ ಉತ್ತರ ನೀಡಬೇಕಿದೆ. ಉಪ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧಿಸುವುದು ಉತ್ತಮ ಎಂಬ ಸಲಹೆಯನ್ನು ಹಲವಾರು ಶಾಸಕರು ಸಭೆಯಲ್ಲಿ ನೀಡಿದ್ದಾರೆ ಎಂದು ಹೇಳಲಾಗಿದೆ.
ಉಪ ಚುನಾವಣೆಯ ಜವಾಬ್ದಾರಿಯನ್ನು ಒಂದೊಂದು ಕ್ಷೇತ್ರಕ್ಕೆ ಒಬ್ಬೊಬ್ಬ ಹಿರಿಯ ನಾಯಕನನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಬೇಕು. ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಕ್ರಿಯವಾಗಿರುವಂತೆ ಕ್ರಮ ಕೈಗೊಳ್ಳಬೇಕು. ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು, ಬೂತ್ ಮಟ್ಟದಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂಬ ಸಲಹೆಗಳು ಸಭೆಯಲ್ಲಿ ವ್ಯಕ್ತವಾಗಿವೆ.
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಬೇಕು ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೂ, ಈ ಸಂಬಂಧ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರಲು ಶಾಸಕರು ತೀರ್ಮಾನಿಸಿದ್ದಾರೆ.
ವಿರೋಧ ಪಕ್ಷದ ನಾಯಕನ ಆಯ್ಕೆ ಹಾಗೂ ಬಿಬಿಎಂಪಿ ಸೇರಿದಂತೆ ಇನ್ನಿತರೆಡೆ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಚರ್ಚೆ ನಡೆಸಲು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಝಾದ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದು, ಶಾಸಕರ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದಾರೆ.