ಕತ್ತು ಸೀಳಿ ಬಾಲಕಿಯ ಬರ್ಬರ ಹತ್ಯೆ !

ಶಿವಮೊಗ್ಗ, ಆ. 4: ಮನೆಯಲ್ಲಿಯೇ ಬಾಲಕಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ಜಿಲ್ಲೆಯ ಭದ್ರಾವತಿಯ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಳಿಂಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದ್ದು, ರವಿವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದೆ.
ಇಂದಿರಾ (16) ಕೊಲೆಗೀಡಾದ ಬಾಲಕಿ ಎಂದು ಗುರುತಿಸಲಾಗಿದೆ.
ಅಡುಗೆ ಮನೆಯಲ್ಲಿ ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದರು. ಹಾಗೆಯೇ ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕಾಗಮಿಸಿ ಮಾಹಿತಿ ಕಲೆ ಹಾಕಿದರು.
ನಿಗೂಢ
ಕೊಲೆಗೀಡಾದ ಇಂದಿರಾ ಭದ್ರಾವತಿಯ ಕಾಲೇಜ್‍ನಲ್ಲಿ ಪ್ರಥಮ ಪಿಯುಸಿ ಅಭ್ಯಾಸ ಮಾಡುತ್ತಿದ್ದಳು. ರಾತ್ರಿ ಮನೆಯವರೆಲ್ಲ ಮಲಗಿದ್ದ ವೇಳೆ ಬಾಲಕಿಯ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ಬೆಳಗ್ಗೆ ಮನೆಯವರು ಎದ್ದ ನಂತರವೇ ಘಟನೆ ಬೆಳಕಿಗೆ ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





