ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ 5 ತಂಡ ರಚನೆ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು, ಆ. 13: ರಾಜ್ಯದಲ್ಲಿ ನೆರೆ ಪರಿಸ್ಥಿತಿ ಅಧ್ಯಯನಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಐದು ವಿಶೇಷ ತಂಡಗಳನ್ನು ರಚನೆ ಮಾಡಿದ್ದು, ಉತ್ತರ ಕನ್ನಡ/ಶಿವಮೊಗ್ಗ, ಮೈಸೂರು/ಕೊಡಗು, ಹಾಸನ/ಚಿಕ್ಕಮಗಳೂರು, ಉಡುಪಿ/ ಮಂಗಳೂರು ಹಾಗೂ ಬಳ್ಳಾರಿ/ಕೊಪ್ಪಳ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದೆ.
ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಡಾ.ಎಚ್.ಸಿ.ಮಹದೇವಪ್ಪ, ಹಿರಿಯ ಮುಖಂಡ ಬಿ.ಎಲ್.ಶಂಕರ್, ಮಾಜಿ ಸಚಿವ ರಮಾನಾಥ್ ರೈ ಹಾಗೂ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅಧ್ಯಕ್ಷತೆಯಲ್ಲಿ ಐದು ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಕೇಂದ್ರದ ನೆರವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯದಲ್ಲಿ ಸಮೀಕ್ಷೆ ನಡೆಸಿದರೂ, ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಇನ್ನೂ ನೆರವು ಘೋಷಣೆ ಮಾಡಿಲ್ಲ ಎಂದು ಅವರು ಆಕ್ಷೇಪಿಸಿದರು.
ಈ ಹಿಂದೆ ನೆರೆ ಬಂದಾಗ ಪ್ರಧಾನಿ ಆಗಿದ್ದ ಮನಮೋಹನ್ ಸಿಂಗ್ ಅವರು ಖುದ್ದು ವೈಮಾನಿಕ ಸಮೀಕ್ಷೆ ನಡೆಸಿ ಸಾವಿರಾರು ಕೋಟಿ ನೆರವು ನೀಡಿದ್ದರು ಎಂದು ಸ್ಮರಿಸಿದ ಅವರು, ಕೇಂದ್ರ ಸರಕಾರ ರಾಜ್ಯದ 17 ಜಿಲ್ಲೆಗಳ ನೆರೆ ಸಂಕಷ್ಟಕ್ಕೆ ಸಿಲುಕಿದ್ದರೂ ಇನ್ನೂ ಒಂದು ಬಿಡಿಗಾಸು ಘೋಷಣೆ ಮಾಡಲಿಲ್ಲ ಎಂದು ಟೀಕಿಸಿದರು.
ಪ್ರತಿಭಟನೆ ರದ್ದು: ಅನರ್ಹ ಶಾಸಕರ ವಿರುದ್ಧ ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ. ಪಕ್ಷಕ್ಕೆ ದ್ರೋಹ ಮಾಡಿದ ಅನರ್ಹ ಶಾಸಕರಿಗೆ ಮತದಾರರು ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆಂದು ನುಡಿದರು.
ಕೇಂದ್ರ ಸರಕಾರ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಕುರಿತು ಕೂಡಲೇ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, 5 ಸಾವಿರ ಕೋಟಿ ರೂ.ನೆರವು ಪ್ರಕಟಿಸಬೇಕು ಎಂದ ಅವರು, ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದರೂ ಯಾವುದೇ ತೀರ್ಮಾನ ಪ್ರಕಟಿಸಿಲ್ಲ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.
‘ನೆರೆ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸದಿದ್ದರೆ ಸರಕಾರ ಬೀಳಿಸುತ್ತೇವೆ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದು, ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಸರಕಾರದ ಬಗ್ಗೆ ಅವರಿಗೆ ಇರುವ ಜಿಗುಪ್ಸೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದೂ ಇಲ್ಲದಂತಿದೆ’
-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ