20 ಸಾವಿರ ಪಿಒಪಿ ಗಣೇಶ ಮೂರ್ತಿ ವಶ

ಬೆಂಗಳೂರು, ಆ.17: ನಿಷೇಧಿತ 20 ಸಾವಿರಕ್ಕೂ ಅಧಿಕ ಪಿಒಪಿ ಮತ್ತು ರಾಸಾಯನಿಕ ಬಣ್ಣಲೇಪಿತ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ಗೋಡೌನ್‌ಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ.
ಶನಿವಾರ ನಗರದಲ್ಲಿ ಗಣೇಶ ಮೂರ್ತಿ ತಯಾರಕರು ಪಿಒಪಿ ಮತ್ತು ರಾಸಾಯನಿಕ ಬಣ್ಣಲೇಪಿತ ಗಣೇಶ ಮೂರ್ತಿಗಳನ್ನು ತಯಾರು ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದು ಕಂಡುಬಂದ ಹಿನ್ನೆಲೆಯಲ್ಲಿ, ಮಂಡಳಿಯ ಹಿರಿಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಮಾಧ್ಯಮದವರೊಂದಿಗೆ ಕುಂಬಳಗೋಡಿನ ವಿನಾಯಕ ಮತ್ತು ಆರ್‌ವಿ ಕಾಲೇಜ್ ಹತ್ತಿರವಿರುವ ಗೋಡೌನ್ ಸೇರಿದಂತೆ ನಗರದ 6 ಗೋಡೌನ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿ ಆದೇಶಿಸಿದರು.
ರಾಜ್ಯದಲ್ಲಿ ಪಿಒಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ತಯಾರು ಮಾಡದಿರಲು ಹಾಗೂ ಅಂತಹ ವಿಗ್ರಹಗಳನ್ನು ವಶಪಡಿಸಿಕೊಳ್ಳಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ 2016ರ ನ.28ರಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ನೀಡಿದೆ. ಆದರೂ ಮಾರಾಟ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.





