ಮೆಡಿಕಲ್ ಸೀಟ್ ಕೊಡಿಸುವುದಾಗಿ ವಂಚನೆ: ಆರೋಪಿ ಬಂಧನ

ಬೆಂಗಳೂರು, ಆ.24: ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಲ್ಲಿ ಸೀಟ್ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪದಡಿ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹೆಣ್ಣೂರಿನಲ್ಲಿರುವ ಫ್ಯೂಚರ್ ಎಜುಕೇಶನ್ ಕನ್ಸಲ್ಟೆನ್ಸಿ ಪ್ರೈ.ಲಿ. ಎಂಬ ಹೆಸರಿನ ಕಂಪೆನಿ ಸ್ಥಾಪಿಸಿದ್ದ ಬಿಹಾರ್ ಮೂಲದ ಮುಖೇಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿದ್ದ ಆರೋಪಿ ಮುಖೇಶ್ ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಲ್ಲಿ ಸೀಟು ಕೊಡಿಸುವುದಾಗಿ ಹಲವು ಜನರಿಗೆ ಮೋಸ ಮಾಡಿದ್ದಾನೆ. ಈ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೇ ಪ್ರಕರಣದಲ್ಲಿ ಪ್ರಭಾಸ್ ಎಂಬಾತನ ಕೈವಾಡವಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
Next Story