ಒಂದಿಬ್ಬರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು, ಆ.26: ಒಂದಿಬ್ಬರು ಸೇರಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಸೋಮವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಸಹ ಪ್ರಚಾರ ಪಡೆದು ಕೆಪಿಸಿಸಿ ಅಧ್ಯಕ್ಷರಾಗಲು ಸಾಧ್ಯವಿಲ್ಲ. ಕೇವಲ ಒಬ್ಬರಿಂದ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಹೇಳುವುದು ಸರಿಯಲ್ಲ. ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ನುಡಿದರು.
ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಝಾದ್ ರಾಜ್ಯಕ್ಕೆ ಆಗಮಿಸುತ್ತಿರುವ ಬಗ್ಗೆ ಮಾಹಿತಿ ಇಲ್ಲ. ಅದೇ ರೀತಿ, ಕೆಪಿಸಿಸಿ ಪುನಾರಚನೆ ಸಹ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದ್ದು, ಬಿಜೆಪಿ ಸರಕಾರದ ತಪ್ಪುಗಳನ್ನು ಮರೆಮಾಚಿಸಿ, ಜನರ ಗಮನ ಬೇರೆ ಕಡೆ ಸೆಳೆಯಲು ಇಂತಹ ಗಾಳಿ ಸುದ್ದಿಗಳನ್ನು ಹರಿಬಿಡಲಾಗುತ್ತಿದೆ ಎಂದು ದೂರಿದರು.
ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಅಕ್ರಮದ ನೆಪದಲ್ಲಿ ಕಾಂಗ್ರೆಸ್ ಸರಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಆರೋಪಿಸಿದರು.





