ಮಂಗಳೂರು ಮನಪಾ ಚುನಾವಣೆ ಪ್ರಕ್ರಿಯೆ ನ.15 ರೊಳಗೆ ಪೂರ್ಣಗೊಳಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಆ.27: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಪ್ರಕ್ರಿಯೆಯನ್ನು ನವೆಂಬರ್ 15ರೊಳಗೆ ಪೂರ್ಣಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಕುರಿತು ಮಂಗಳೂರಿನ ಅಬ್ದುಲ್ ಗಫೂರ್, ಮುಹಮ್ಮದ್ ಹನೀಫ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲ ಎ.ಎಂ.ನಿತೀನ್ ಅವರು, ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸಕಾಲದಲ್ಲಿ ನಡೆಯದೇ, ಹಲವು ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದಿವೆ. ಈ ಕೂಡಲೇ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗಕ್ಕೆ ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ನವೆಂಬರ್ 15ರೊಳಗೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಿರ್ದೇಶಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿತು.
Next Story