ಮಂಗಳೂರು: ನಂಬರ್ ಪ್ಲೇಟ್ ರಹಿತ 75 ದ್ವಿಚಕ್ರ ವಾಹನ ವಶಕ್ಕೆ

ಮಂಗಳೂರು: ನಗರದಲ್ಲಿ ನಂಬರ್ ಪ್ಲೇಟ್ ರಹಿತ ವಾಹನಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇದುವರೆಗೆ 75 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ನಂಬರ್ ಪ್ಲೇಟ್ ಇಲ್ಲದ ಸಾಕಷ್ಟು ವಾಹನಗಳು ಓಡಾಡುತ್ತಿದ್ದು, ಇಂತಹ ವಾಹನಗಳನ್ನು ಕಾನೂನು ಬಾಹಿರ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ನಂಬರ್ ಪ್ಲೇಟ್ ಇಲ್ಲದ 75 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆ ನಿರಂತರ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೆ, ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳ ಸವಾರರು ನಂಬರ್ ಪ್ಲೇಟ್ ಸಹಿತ ಸಂಚರಿಸಲು ಬೀಟ್ ಪೊಲೀಸರ ವಾಟ್ಸ್‌ಆ್ಯಪ್ ಗ್ರೂಪ್‌ಗಳ ಮೂಲಕ 54 ಸೆಕೆಂಡ್‌ನ ಆಡಿಯೋ ಸಂದೇಶವನ್ನು ಪೊಲೀಸ್ ಆಯುಕ್ತರು ರವಾನಿಸಿದ್ದಾರೆ.
ಕಳೆದ ವಾರ ಟಿಂಟ್ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. ಸಾರ್ವಜನಿಕರು ತಮ್ಮ ವಾಹನಗಳಿಗೆ ಸರಿಯಾದ ನಂಬರ್ ಪ್ಲೇಟ್‌ಗಳನ್ನು ಅಳವಡಿಸಬೇಕು. ಕಾರುಗಳಿಗೆ ಟಿಂಟ್ ಅಳವಡಿಸಿದ್ದರೆ ಅದನ್ನು ತೆರವು ಮಾಡಬೇಕು. ಸಂಚಾರ ನಿಯಮ ಉಲ್ಲಂಘಿಸುವ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಹರ್ಷ ಪಿ.ಎಸ್.ಎಚ್ಚರಿಕೆ ನೀಡಿದ್ದಾರೆ.









