ಸೊರಬ: ಈಜಲು ತೆರಳಿದ ಎಸೆಸೆಲ್ಸಿ ವಿದ್ಯಾರ್ಥಿಗಳಿಬ್ಬರು ನೀರುಪಾಲು
ಶಿವಮೊಗ್ಗ, ಸೆ. 15: ಕೆರೆಯಲ್ಲಿ ಈಜಾಡಲು ತೆರಳಿದ ಇಬ್ಬರು ಎಸೆಸೆಲ್ಸಿ ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಕಾರ್ತಿಕ್ (16) ಹಾಗೂ ವಿನಾಯಕ (16) ಮೃತಪಟ್ಟ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಇಬ್ಬರು ಉದ್ರಿ ಗ್ರಾಮದಲ್ಲಿರುವ ಪ್ರೌಢಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದರು. ಭಾನುವಾರ ಶಾಲೆಗೆ ರಜೆಯಿದ್ದ ಕಾರಣದಿಂದ ಮಧ್ಯಾಹ್ನ ಕೆರೆಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನೀರಿನಲ್ಲಿ ಇಬ್ಬರ ಶವ ತೇಲುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ದಡಕ್ಕೆ ತಂದಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದರು. ಪೊಲೀಸರ ತನಿಖೆಯ ನಂತರವಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story