ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಮೃತ್ಯು

ಬೆಂಗಳೂರು, ಸೆ.15: ಪ್ರತ್ಯೇಕ ಎರಡು ರಸ್ತೆ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಗರ ವ್ಯಾಪ್ತಿಯಲ್ಲಿ ನಡೆದಿದೆ.
ಯಶವಂತಪುರದ ಸಿಎಂಟಿ ಜಂಕ್ಷನ್ ಬಳಿ ಬಟ್ಟೆ ಮಾರುತ್ತಿದ್ದ ಶೌಕತ್(26) ಎಂಬುವರು ಕಂಟೇನರ್ ಲಾರಿ ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
ಜೈ ಭುವನೇಶ್ವರಿ ನಗರದ ನಿವಾಸಿಯಾಗಿರುವ ಶೌಕತ್, ಸಿಎಂಟಿ ಜಂಕ್ಷನ್‌ನ ರಸ್ತೆ ಬದಿ ಸಣ್ಣ ವ್ಯಾಪಾರ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ನುಗ್ಗಿದ ಲಾರಿ, ಅವರಿಗೆ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.
ಮತ್ತೊಂದು ಪ್ರಕರಣದಲ್ಲಿ, ಇಲ್ಲಿನ ನೈಸ್ ರಸ್ತೆ ಬಳಿ ನಿಯಂತ್ರಣ ತಪ್ಪಿ ಬೈಕ್‌ನಲ್ಲಿ ಸಾಗುತ್ತಿದ್ದ ಧನಶಂಕರ್ ಮೃತಪಟ್ಟಿದ್ದಾರೆ. ಕೆಆರ್ ಪುರಂನ ಮಂಜುಶ್ರೀ ಲೇಔಟ್ ನಿವಾಸಿ ಆಗಿರುವ ಅವರು, ಎಲೆಕ್ಟ್ರಿಯನ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ನಿನ್ನೆ ಬೆಳಗ್ಗೆ ಕೆಲಸಕ್ಕೆ ಮನೆಯಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಮಾರ್ಗ ಮಧ್ಯೆ ನೈಸ್ ರಸ್ತೆಯ ಪಕ್ಕದ ರೇಲಿಂಗ್ಸ್‌ಗೆ ಢಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.







