ಉಡುಪಿ: ಹಿರಿಯ ನಾಗರಿಕರಿಗೆ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆ

ಉಡುಪಿ, ಸೆ.25: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಜಂಟಿ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಬುಧವಾರ ಅಜ್ಜರಕಾಡು ಜಿಲ್ಲಾ ಕ್ರೆಡಾಂಗಣದಲ್ಲಿ ಹಿರಿಯ ನಾಗರಿಕರ ಕ್ರೆಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು.
ಕಾರ್ಯಕ್ರಮವನ್ನು ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ಅಧ್ಯಕ್ಷ ಸಿ.ಎಸ್. ರಾವ್ ಉದ್ಘಾಟಿಸಿದರು. ಬಳಿಕ ಹಿರಿಯ ನಾಗರಿಕರಿಗಾಗಿ ಪುರುಷರ ಮತ್ತು ಮಹಿಳಾ ವಿಭಾಗದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಈ ಸ್ಪರ್ಧೆಗಳು 60ರಿಂದ 70ವರ್ಷ, 71ರಿಂದ 80 ವರ್ಷ ಹಾಗೂ 80 ವರ್ಷಕ್ಕಿಂತ ಮೇಲ್ಪಟ್ಟ ವಿಭಾಗಗಳಲ್ಲಿ ಪ್ರತ್ಯೇಕವಾಗಿ ನಡೆದವು. ಹಿರಿಯ ನಾಗರಿಕರು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.
ಇದರೊಂದಿಗೆ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರತ್ಯೇಕವಾದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಸಹ ನಡೆದವು. ಏಕಪಾತ್ರಾಭಿನಯ, ಜನಪದ ಗೀತೆ ಗಾಯನ ಸ್ಪರ್ಧೆಗಳಲ್ಲಿ ಇವರು ಭಾಗವಹಿಸಿದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ಚಂದ್ರ ನಾಯ್ಕಾ, ಉಡುಪಿ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ, ಹಿರಿಯ ನಾಗರಿಕರ ಸಂಸ್ಥೆಯ ಗೌರವಾಧ್ಯಕ್ಷ ಎ.ಪಿ ಕೊಡಂಚ, ಹಿರಿಯ ನಾಗರಿಕರ ಸಂಸ್ಥೆಯ ಕಾರ್ಯದರ್ಶಿ ಕೆ.ಸದಾನಂದ ಹೆಗ್ಡೆ, ಉಪಾಧ್ಯಕ್ಷ ಎಚ್. ವಿಶ್ವನಾಥ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಹಿರಿಯ ನಾಗರಿಕರ ಸಹಾಯವಾಣಿಯ ಗಣೇಶ್ ಸ್ವಾಗತಿಸಿ, ವಂದಿಸಿದರು.









