ಗೋ ಶಾಲೆಗಳ ಬಗ್ಗೆ ತಪ್ಪು ಮಾಹಿತಿ: ಪ್ರಮಾಣ ಪತ್ರ ಸಲ್ಲಿಸಲು ಹೈಕೋರ್ಟ್ ಆದೇಶ

ಬೆಂಗಳೂರು, ಸೆ.26: ರಾಜ್ಯದ ಬರಪೀಡಿತ ತಾಲೂಕುಗಳಲ್ಲಿ ಸರಕಾರ ತೆರೆದಿರುವ ಆಯ್ದ 20 ಗೋ ಶಾಲೆಗಳಿಗೆ ಕಾನೂನು ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿದರೆ ಅದರಲ್ಲಿ 14 ಗೋ ಶಾಲೆಗಳು ಕಣ್ಮರೆಯಾಗಿವೆ ಎಂದು ಕಿಡಿಕಾರಿದ ಹೈಕೋರ್ಟ್, ಸುಳ್ಳು ವರದಿ ನೀಡಿರುವ ಬಗ್ಗೆ ಅ.10ರಂದು ಪ್ರಮಾಣ ಪತ್ರ ಸಲ್ಲಿಸಲು ರಾಜ್ಯ ಸರಕಾರಕ್ಕೆ ಆದೇಶಿಸಿದೆ.
ಈ ಕುರಿತು ಹೈಕೋರ್ಟ್ ಕಾನೂನು ಸೇವಾ ಸಮಿತಿ ಹಾಗೂ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ನಿವಾಸಿ ಎ.ಮಲ್ಲಿಕಾರ್ಜುನ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಬರಪೀಡಿತ ತಾಲೂಕುಗಳೆಂದು ಘೋಷಿಸಿದ ಗೋ ಶಾಲೆಗಳಲ್ಲಿ ಪ್ರತಿ ಜಾನುವಾರಿಗೆ 6 ಕೆಜಿ ಒಣ ಮೇವು, 18 ಕೆಜಿ ಹಸಿರು ಮೇವು ಹಾಗೂ 1 ಕೆಜಿ ಪಶು ಆಹಾರ ಪೂರೈಸಬೇಕೆಂದು ಕಳೆದ ವಿಚಾರಣೆ ವೇಳೆ ಹೈಕೋರ್ಟ್ ಆದೇಶಿಸಿದೆ. ಆದರೆ, ಸರಕಾರ ಈ ಆದೇಶವನ್ನು ಉಲ್ಲಂಘಿಸಿ ತಮಾಷೆಯಾಗಿ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿತು.
ಸರಕಾರದ ಪರ ವಾದಿಸಿದ ವಕೀಲರು, ರಾಜ್ಯದ ಪ್ರವಾಹ ಪೀಡಿತ ಪ್ರದೇಶದಲ್ಲಿ 9 ಗೋ ಶಾಲೆಗಳನ್ನು ಮುಚ್ಚಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಸುಳ್ಳು ವರದಿ ನೀಡಿರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ಆದೇಶಿಸಿ, ವಿಚಾರಣೆಯನ್ನು ಮುಂದೂಡಿತು. ಪಶುಸಂಗೋಪನೆ ಇಲಾಖೆಯ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಹೈಕೋರ್ಟ್ ಮುಂದೆ ಖುದ್ದು ಹಾಜರಾಗಿದ್ದರು.