ನೆರೆ ಸಂತ್ರಸ್ತರಿಗೆ ಒಂದೆರಡು ದಿನಗಳಲ್ಲಿ ಕೇಂದ್ರದಿಂದ ನೆರೆ ಪರಿಹಾರ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು, ಸೆ. 28: ನೆರೆ ಸಂತ್ರಸ್ತರಿಗೆ ಒಂದೆರಡು ದಿನಗಳಲ್ಲಿ ಕೇಂದ್ರ ಸರಕಾರ ಪರಿಹಾರದ ಹಣವನ್ನು ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಇದೀಗ ತಾನೇ ನನ್ನೊಂದಿಗೆ ಈ ವಿಚಾರದ ಬಗ್ಗೆ ಚರ್ಚಿಸಿದ್ದು, ಕೂಡಲೇ ಕೇಂದ್ರ ಹಣ ಬಿಡುಗಡೆ ಮಾಡಲಿದೆ ಎಂದು ಹೇಳಿದರು.
ಕರ್ನಾಟಕ ಸೇರಿದಂತೆ ದೇಶದ ನಾಲ್ಕೈದು ರಾಜ್ಯಗಳಿಗೆ ಇಂದು ಅಥವಾ ನಾಳೆ ಕೇಂದ್ರ ಸರಕಾರ ಪರಿಹಾರವನ್ನು ಬಿಡುಗಡೆ ಮಾಡಲಿದೆ. ಇದರಿಂದ ಸಂತ್ರಸ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.
15 ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಚುನಾವಣೆ ಎದುರಿಸಲು ಪಕ್ಷ ಸಿದ್ಧವಾಗಿದೆ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸುತ್ತೇವೆ. ಪಕ್ಷದಲ್ಲಿ ಯಾವುದೇ ರೀತಿಯ ಸಮಸ್ಯೆಗಳಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚಿನ ಸ್ಥಾನ ಗೆಲ್ಲಲು ಕಾರ್ಯತಂತ್ರ ರೂಪಿಸುತ್ತೇವೆ ಎಂದು ತಿಳಿಸಿದರು.