ನಾಳೆ ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ
ಸಾಹಿತಿ ಡಾ.ಎಸ್.ಎಲ್.ಭೈರಪ್ಪರಿಂದ ಉದ್ಘಾಟನೆ

ಮೈಸೂರು,ಸೆ.28: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ಸೆ.29ರ ರವಿವಾರ ಚಾಮುಂಡಿ ಬೆಟ್ಟದಲ್ಲಿ ನೆರವೇರಲಿದ್ದು ಒಂಬತ್ತು ದಿನಗಳ ನವರಾತ್ರಿ ಉತ್ಸವಕ್ಕೆ ಚಾಲನೆ ದೊರೆಯಲಿದೆ.
ಬೆಳಗ್ಗೆ 9.39 ರಿಂದ 10.25 ರೊಳಗಿನ ನಾಡ ಅಧಿದೇವತೆ ಶ್ರೀಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಡಾ.ಎಸ್.ಎಲ್.ಭೈರಪ್ಪ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಘನ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿ, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎಸ್.ಅಶ್ವಥ್ ನಾರಾಯಣ್, ಲಕ್ಷ್ಮಣ್ ಸವದಿ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಪ್ರವಾಸೋದ್ಯಮ ಹಾಗೂ ಕನ್ನಡ ಸಂಸ್ಕೃತಿ ಸಚಿವ ಸಿ.ಟಿ.ರವಿ, ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೇಯರ್ ಪುಷ್ಪಲತಾ ಜಗನ್ನಾಥ್, ಜಿ.ಪಂ.ಅಧ್ಯಕ್ಷೆ ಪರಿಮಳಾ ಶ್ಯಾಂ, ಸಂಸದರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸಪ್ರಸಾದ್, ಸುಮಲತಾ ಅಂಬರೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇನ್ನು ಮೈಸೂರು ಜಿಲ್ಲೆಯ ವಿಧಾನಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು, ಚಾಮುಂಡಿ ಬೆಟ್ಟದ ಗ್ರಾ.ಪಂ.ಅಧ್ಯಕ್ಷರು ಜನಪ್ರತಿನಿಧಿಗಳು ಆಗಮಿಸಲಿದ್ದಾರೆ.







