10 ತಿಂಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭ: ಸಿಎಂ ಯಡಿಯೂರಪ್ಪ
![10 ತಿಂಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭ: ಸಿಎಂ ಯಡಿಯೂರಪ್ಪ 10 ತಿಂಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭ: ಸಿಎಂ ಯಡಿಯೂರಪ್ಪ](https://www.varthabharati.in/sites/default/files/images/articles/2019/09/30/212588-1569846460.jpg)
ಶಿವಮೊಗ್ಗ, ಸೆ. 30: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿ ಸ್ಥಗಿತಗೊಂಡಿರುವ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರದಲ್ಲಿಯೇ ಪುನಾರಾರಂಭಿಸಲಾಗುವುದು. 10 ತಿಂಗಳಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸೋಮವಾರ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, 'ವಿಮಾನ ನಿಲ್ದಾಣ ಕಾಮಗಾರಿಗೆ 45 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ವಿಮಾನ ನಿಲ್ದಾಣ ಕಾರ್ಯಾರಂಭಗೊಂಡರೆ ಹೆಚ್ಚಿನ ಕೈಗಾರಿಕೆಗಳು ಆರಂಭವಾಗಿ, ಉದ್ಯೋಗವಕಾಶ ಸೃಷ್ಟಿಯಾಗಲಿದೆ' ಎಂದರು.
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಮುಂದಿನ ಬಜೆಟ್ನಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು. ಜಿಲ್ಲೆಯ ಎಲ್ಲಾ ಪ್ರಮುಖ ನೀರಾವರಿ ಯೋಜನೆಗಳನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಹೊಸೂರು, ಉಡುಗಣಿ, ತಾಳಗುಂದ ನೀರಾವರಿ ಯೋಜನೆಗೆ ಈಗಾಗಲೇ 607 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದೇ ರೀತಿ ಹೊಸಳ್ಳಿ ಏತನೀರಾವರಿ, ಕಲ್ಲೂರು ನೀರಾವರಿ ಯೋಜನೆ, ಸೊರಬ ತಾಲೂಕಿನ ಮೂರು ಏತ ನೀರಾವರಿ ಯೋಜನೆಗಳು ಸದ್ಯದಲ್ಲೇ ಆರಂಭಗೊಳ್ಳಲಿವೆ ಎಂದು ಮಾಹಿತಿ ನೀಡಿದರು.
ಪ್ರವಾಹ ಪರಿಹಾರ ಕಾಮಗಾರಿಗಳನ್ನು ತ್ವರಿತಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಅಕ್ಟೋಬರ್ ನಾಲ್ಕರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾಮಗಾರಿಗಳ ಪರಿಶೀಲನೆ ನಡೆಸಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗೆ ಕ್ರಮಕೈಗೊಳ್ಳಲಾಗಿದೆ. ಶಿಕಾರಿಪುರದಲ್ಲಿ ಶಾಹಿ ಗಾರ್ಮೆಂಟ್ ಘಟಕ ಆರಂಭವಾಗಲಿದ್ದು, ಇದರಿಂದ ಈ ಭಾಗದ 2000 ಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಉದ್ಯೋಗವಕಾಶ ಸೃಷ್ಟಿಯಾಗಲಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಅವಕಾಶವಿದೆ. ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಡಾ.ಸುಧಾಮೂರ್ತಿ ಅವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದರು. ಈ ವೇಳೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.
ಶಿವಮೊಗ್ಗ-ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ 750 ಕೋಟಿ ರೂ.
ಶಿವಮೊಗ್ಗ -ಶಿಕಾರಿಪುರ- ರಾಣೆಬೆನ್ನೂರು ರೈಲ್ವೆ ಮಾರ್ಗ ಯೋಜನೆಗೆ ಆದಷ್ಟು ಶೀಘ್ರ ಚಾಲನೆ ನೀಡಲಾಗುವುದು. ಇದಕ್ಕಾಗಿ ರಾಜ್ಯ ಸರ್ಕಾರದ ಪಾಲು 750 ಕೋಟಿ ರೂ. ಬಿಡುಗಡೆಯಾಗಿದೆ. ಈ ಯೋಜನೆಯ ತ್ವರಿತಗತಿಯ ಅನುಷ್ಠಾನಕ್ಕಾಗಿ ಶಿಕಾರಿಪುರದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿ ತೆರೆಯಲಾಗಿದ್ದು, ಮುಖ್ಯಮಂತ್ರಿಗಳು ಕಚೇರಿ ಉದ್ಘಾಟಿಸಿದ್ದಾರೆ. ಶಿವಮೊಗ್ಗ ನಗರದ ಕೋಟೆಗಂಗೂರಿನಲ್ಲಿ ಸ್ಯಾಟಲೈಟ್ ರೈಲ್ವೆ ನಿಲ್ದಾಣ ಸ್ಥಾಪನೆಗೆ ರೈಲ್ವೆ ಇಲಾಖೆಯಿಂದ 60 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ' ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.