ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣ: ರಾಜ್ಯ ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಅ.1: ಆ್ಯಂಬಿಡೆಂಟ್ ಕಂಪೆನಿಯ ಬಹುಕೋಟಿ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರ, ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಸಾಮಾಜಿಕ ಹೋರಾಟಗಾರ, ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಆ್ಯಂಬಿಡೆಂಟ್ ಕಂಪೆನಿಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕರು, ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬುದನ್ನು ಸಿಸಿಬಿ ಅಧಿಕಾರಿಗಳು ಬಹಿರಂಗಪಡಿಸಿದ್ದರು. ಆದರೆ, ಈ ಹಗರಣದ ಬಗ್ಗೆ ಸರಿಯಾಗಿ ತನಿಖೆ ನಡೆಯುತ್ತಿಲ್ಲ. ಹೀಗಾಗಿ, ಈ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ರವಿ ಕೃಷ್ಣಾರೆಡ್ಡಿ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದರು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರ, ಸಿಬಿಐಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.