ಗಾಂಧಿ ಚಿಂತನೆಯಿಂದ ಯುವಕರು ಪ್ರೇರಣೆ ಪಡೆಯಲಿ: ಸಚಿವ ಕೋಟ
ಪುರಭವನದ ಗಾಂಧಿ ಪಾರ್ಕ್‌ನಲ್ಲಿ ಗಾಂಧಿ ಜಯಂತಿ

ಮಂಗಳೂರು, ಅ.2: ಮಹಾತ್ಮಾ ಗಾಂಧೀಜಿಯವರ ಅಹಿಂಸಾ ತತ್ವ, ಸತ್ಯ, ಸ್ವಚ್ಛತೆ ಇತ್ಯಾದಿ ವಿಚಾರ, ಚಿಂತನೆಯಿಂದ ಯುವ ಜನಾಂಗ ಪ್ರೇರಣೆ ಪಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದ್ದಾರೆ.
ದ.ಕ. ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಕಸಾಪ, ಜಿಲ್ಲಾ ಭಾರತ್ ಸೇವಾದಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಪುರಭವನದ ಗಾಂಧಿ ಪಾರ್ಕ್‌ನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಮಹಾನಗರ ಪಾಲಿಕೆ ಆಯುಕ್ತ ಅಜಿತ್‌ಕುಮಾರ್ ಹೆಗ್ಡೆ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ, ತಹಶೀಲ್ದಾರ್ ಗುರುಪ್ರಸಾದ್, ಭಾರತ್ ಸೇವಾದಳದ ಜಿಲ್ಲಾಧ್ಯಕ್ಷ ಬಶೀರ್ ಬೈಕಂಪಾಡಿ, ಪ್ರಧಾನ ಕಾರ್ಯದರ್ಶಿ ಟಿ.ಕೆ. ಸುಧೀರ್, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮತ್ತಿತರರಿದ್ದರು.
ಇದಕ್ಕೂ ಮೊದಲು ಬಲ್ಮಠ ಸರ್ಕಾರಿ ಪ.ಪೂ. ಕಾಲೇಜು ಆವರಣದಿಂದ ಪುರಭವನದ ತನಕ ಪ್ರಭಾತ್ ಫೇರಿ ಆಯೋಜಿಸಲಾಗಿತ್ತು. ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಪುರಭವನದಲ್ಲಿ ಗಾಂಧಿ ಭಜನೆ ಕಾರ್ಯಕ್ರಮ ನಡೆಯಿತು.
‘ಪಾಪು ಬಾಪು’ ಕೃತಿ ಬಿಡುಗಡೆ
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರ ತಂದ ಮಹಾತ್ಮ ಗಾಂಧಿ ಅವರ ಜೀವನ ಮತ್ತು ವಿಚಾರಧಾರೆಗೆ ಸಂಬಂಧಿಸಿದ ‘ಪಾಪು ಬಾಪು’ ಕಿರುಪುಸ್ತಕವನ್ನು ಶಾಸಕ ಡಿ.ವೇದವ್ಯಾಸ ಕಾಮತ್ ಲೋಕಾರ್ಪಣೆಗೊಳಿಸಿದರು.










