ಉಡುಪಿ: ತಾಲೂಕು ಮಟ್ಟದ ಕಲಾಶ್ರೀ ಶಿಬಿರ

ಉಡುಪಿ, ಅ.11:ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಹಾಗೂ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಕಲಾಶ್ರೀಯಂಥ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ ಉಡುಪಿ ತಾಪಂ ಉಪಾಧ್ಯಕ್ಷ ಭುಜಂಗ ಶೆಟ್ಟಿ ಹೇಳಿದ್ದಾರೆ.
ಶುಕ್ರವಾರ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲಭವನ ಉಡುಪಿ, ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ ಉಡುಪಿ-ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ನಡೆದ ತಾಲೂಕು ಮಟ್ಟದ ಕಲಾಶ್ರೀ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳಲ್ಲಿ ಮೊಬೈಲ್ ವ್ಯಾಮೋಹ ಹೆಚ್ಚಾಗಿದ್ದು, ಇದರಿಂದ ಮಕ್ಕಳ ದಿನನಿತ್ಯದ ಚಟುವಟಿಕೆಗಳ ಮೇಲೆ ಪ್ರಬಾವ ಬೀರುತ್ತಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿರುವ ಮೊಬೈಲ್ ಗೀಳನ್ನು ಕಡಿಮೆ ಮಾಡಿ ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರ ಹಾಕಲು ಹಾಗೂ ಹೊಸ ವಿಚಾರ ಗಳನ್ನು ತಿಳಿಯಪಡಿಸಲು ಸಹಕಾರಿ ಎಂದರು.
ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಉಡುಪಿ ತಾಲೂಕಿನ ವಿವಿಧ ಶಾಲೆಗಳ 9ರಿಂದ 16 ವರ್ಷ ದೊಳಗಿನ ಮಕ್ಕಳಿಗೆ ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ ಎಂಬ ನಾಲ್ಕು ಪ್ರಕಾರದ ಸ್ಪರ್ಧೆ ಏರ್ಪಡಿಸಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ನಿಟ್ಟಿನಲ್ಲಿ ಕಲಾಶ್ರೀ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತೀರ್ಪುಗಾರರು ಉಪಸ್ಥಿತರಿದ್ದರು. ಸುಷ್ಮಾ ಸ್ವಾಗತಿಸಿ, ಸವಿತಾ ಕಾರ್ಯಕ್ರಮ ನಿರೂಪಿಸಿದರು. ಸಂಗೀತ ವಂದಿಸಿದರು.







