ಬಿಎಸ್‌ವೈ ರಾಜೀನಾಮೆ ನೀಡಿ ಮನೆಗೆ ಹೋಗಲಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು, ಅ. 24: ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಪಕ್ಷಾಂತರಿಗಳನ್ನು ಸೋಲಿಸಿದ್ದಾರೆ. ರಾಜ್ಯದಲ್ಲಿಯೂ ಅದೇ ರೀತಿ ಪಕ್ಷಾಂತರಿಗಳ ಸೋಲು ನಿಶ್ಚಿತ. 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸಲಿದೆ. ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿ ಮನೆಗೆ ಹೋಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿನ ತನ್ನ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹುಮತವಿಲ್ಲದೆ ಸರಕಾರ ರಚಿಸಿರುವ ಬಿಜೆಪಿ ನೇತೃತ್ವದ ಸರಕಾರ ಬೀಳಲಿದ್ದು, ಆ ಬಳಿಕ ನಾವು ಚುನಾವಣೆಗೆ ಹೋಗುತ್ತೇವೆ. ಬಹುಮತವಿಲ್ಲದೆ ಸರಕಾರ ರಚನೆ ಮಾಡಿ ತಪ್ಪು ಮಾಡಿದ ಬಿಜೆಪಿ ದಾರಿಯಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಹೋಗುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಅನರ್ಹರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಪುನಃ ಸೇರ್ಪಡೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಪಕ್ಷಕ್ಕೆ ದ್ರೋಹ ಮಾಡಿ ಹೋದವರನ್ನು ಏಕೆ ಸೇರಿಸಿಕೊಳ್ಳಲಿ ಎಂದ ಸಿದ್ದರಾಮಯ್ಯ, ಹದಿನೈದು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಶೀಘ್ರವೇ ಆಯ್ಕೆ ಮಾಡಲಾಗುವುದು ಎಂದರು.





