ಭಾರೀ ಮಳೆ: ಅ.25ರಂದು ದ.ಕ. ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ
ಮೂರು ದಿನ ಮೀನುಗಾರಿಕೆಗೆ ನಿಷೇಧ

ಸಿಂಧೂ ರೂಪೇಶ್
ಮಂಗಳೂರು, ಅ.24: ಅರಬ್ಬಿ ಸಮುದ್ರ ಹಾಗೂ ಲಕ್ಷ ದ್ವೀಪಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕರಾವಳಿಯಲ್ಲಿ ಬುಧವಾರ ರಾತ್ರಿಯಿಂದಲೇ ಭಾರೀ ಮಳೆ ಸುರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ಪೂರ್ವ ತರಗತಿವರೆಗೆ) ಅ.25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಗುರುವಾರ ಆದೇಶ ಹೊರಡಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರರು ಜಾಗ್ರತೆ ವಹಿಸಬೇಕು. ಮೀನುಗಾರರಿಗೆ ಮುಂದಿನ ಮೂರು ದಿನಗಳವರೆಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪ ಸಂಬಂಧಿ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ನಂ. 1077 ಸಂಪರ್ಕಿಸಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶದಲ್ಲಿ ತಿಳಿಸಿದ್ದಾರೆ.







