ಮುಸ್ಲಿಂ ಮಹಿಳೆಯರಿಗೆ ಮಸೀದಿ ಪ್ರವೇಶ ಕೋರಿದ ಅರ್ಜಿಗೆ ಪ್ರತಿಕ್ರಿಯಿಸಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಹೊಸದಿಲ್ಲಿ, ಅ.25: ಮುಸ್ಲಿಂ ಮಹಿಳೆಯರಿಗೂ ಮಸೀದಿಗಳಿಗೆ ಪ್ರವೇಶಾವಕಾಶ ನೀಡಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಮುಸ್ಲಿಂ ಮಹಿಳೆಯರಿಗೆ ಮಸೀದಿಗೆ ಪ್ರವೇಶ ನಿರಾಕರಿಸುವುದು ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಆದ್ದರಿಂದ ಪ್ರವೇಶಾವಕಾಶ ಒದಗಿಸುವಂತೆ ಸರಕಾರದ ಅಧಿಕಾರಿಗಳು ಹಾಗೂ ವಕ್ಫ್ ಮಂಡಳಿ ಸೇರಿದಂತೆ ಮುಸ್ಲಿಂ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಯಾಸ್ಮೀನ್ ಝುಬೇರ್ ಅಹ್ಮದ್ ಎಂಬವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸುಪ್ರೀಂಕೋರ್ಟ್‌ನ ನ್ಯಾಯಪೀಠ, ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 5ಕ್ಕೆ ನಿಗದಿಗೊಳಿಸಿದೆ.
ಮುಸ್ಲಿಂ ಮಹಿಳೆಯರಿಗೆ ಪ್ರಾರ್ಥನೆ ಸಲ್ಲಿಸಲು ಮಸೀದಿಗಳಿಗೆ ಪ್ರವೇಶಿಸಲು ಅವಕಾಶ ನೀಡಬೇಕೆಂದು ಕೋರಿ ಅಖಿಲ ಭಾರತ ಹಿಂದು ಮಹಾಸಭಾದ ಕೇರಳ ಘಟಕದ ಅಧ್ಯಕ್ಷ ಸಲ್ಲಿಸಿದ್ದ ಅರ್ಜಿಯನ್ನು ಜುಲೈಯಲ್ಲಿ ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು. “ಇದರಿಂದ ನಿಮಗೇನು ತೊಂದರೆ? ತೊಂದರೆಯಾದವರು ನಮ್ಮೆದುರು ಬರಲಿ. ಮುಸ್ಲಿಂ ಮಹಿಳೆಯರು ಅರ್ಜಿ ಸಲ್ಲಿಸಿದರೆ ಆಗ ಪರಿಗಣಿಸಬಹುದು” ಎಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿತ್ತು.





