ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ ಪ್ರಕರಣ: ಇಬ್ಬರು ಅಧಿಕಾರಿಗಳ ಅಮಾನತು

ಹುಬ್ಬಳ್ಳಿ, ಅ.26: ಇತ್ತೀಚೆಗೆ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡಿದ್ದ ಪ್ರಕರಣ ಸಂಬಂಧ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದರು.
ಶನಿವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಲ್ದಾಣದ ವ್ಯವಸ್ಥಾಪಕ ವರುಣ ಕುಮಾರ್ ದಾಸ್ ಹಾಗೂ ಆರ್‌ಪಿಎಫ್ ಪೊಲೀಸ್ (ಎಎಸ್ಸೈ) ಮಂಜುನಾಥ ಕಾಮತ್ ಅಮಾನತುಗೊಂಡಿದ್ದು, ಮೂರು ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ವಿಮಾನ ನಿಲ್ದಾಣಗಳಲ್ಲಿ ಇರುವ ಮಾದರಿಯಲ್ಲಿಯೇ ಎಲ್ಲ ರೈಲ್ವೆ ನಿಲ್ದಾಣಗಳಲ್ಲಿ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗುವುದು ಎಂದ ಅವರು, ಇಲಾಖೆಯ ಭದ್ರತಾ ಸಿಬ್ಬಂದಿ ಜೊತೆ ಪ್ರಯಾಣಿಕರು ಕೂಡ ಎಚ್ಚರಿಕೆಯಿಂದ ಇರಬೇಕು. ಶಂಕಾಸ್ಪದ ವಸ್ತುಗಳು ಕಂಡು ಬಂದರೆ ರೈಲ್ವೆ ಸಿಬ್ಬಂದಿಗೆ ಮಾಹಿತಿ ಕೊಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನೈರುತ್ಯ ರೈಲ್ವೆ ವಲಯದ ಜಿ.ಎಂ. ಎ.ಕೆ. ಸಿಂಗ್, ಡಿಜಿಎಂ ಇ.ವಿಜಯಾ, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪಅಂಟರತಾನಿ, ಕಿಮ್ಸ್ ವೈದ್ಯಕೀಯ ಅಧೀಕ್ಷಕ ಅರುಣಕುಮಾರ ಸಿ. ಸೇರಿದಂತೆ ಪ್ರಮುಖರಿದ್ದರು.







