ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ದೂರು ಸಲ್ಲಿಕೆ

ಬೆಂಗಳೂರು, ನ.23: ಬಿಜೆಪಿಯು ಉಪ ಚುನಾವಣೆಯಲ್ಲಿ ಗೆಲ್ಲಲಿಕ್ಕಾಗಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಈ ಸಂಬಂಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ನಿಂದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಶಿವಲಿಂಗಾ ಶಿವಾಚಾರ್ಯ ಸ್ವಾಮೀಜಿ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ಅಭ್ಯರ್ಥಿ ಗುರು ದುಶ್ಯಾಳ್ ರಿಗೆ ಮುಖ್ಯಮಂತ್ರಿಯ ಪುತ್ರ ಬಿ.ವೈ.ರಾಘವೇಂದ್ರ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧಿಕಾರ ಬಳಸಿಕೊಂಡು ಆಮಿಷವೊಡ್ಡಿ ನಾಮಪತ್ರ ಹಿಂಪಡೆಯುವಂತೆ ಮಾಡಿದ್ದಾರೆ ಎಂದು ಕಾಂಗ್ರೆಸ್ ದೂರಿನಲ್ಲಿ ಆಕ್ಷೇಪಿಸಿದೆ.
ಶಿವಾಚಾರ್ಯ ಸ್ವಾಮೀಜಿಗೆ ಆರ್ಥಿಕ ಸಹಾಯ ಮಾಡುವುದಾಗಿ ಆಸೆಯನ್ನು ಹುಟ್ಟಿಸಲಾಗಿದೆ ಹಾಗೂ ದುಶ್ಯಾಳ್‌ಗೆ ಯಾವುದಾದರೂ ನಿಗಮ ಮಂಡಳಿ ಅಥವಾ ಉನ್ನತ ಸ್ಥಾನದ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂಬ ಭರವಸೆಯನ್ನು ನೀಡಿದ್ದಾರೆ. ಹೀಗಾಗಿ, ಇವರಿಬ್ಬರೂ ನಾಮಪತ್ರ ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ಆಪಾದಿಸಿದೆ.
ಹುಣಸೂರು ಹಾಗೂ ಕೆ.ಆರ್.ಪೇಟೆ ಚುನಾವಣಾ ಪ್ರಚಾರಕ್ಕೆ ಬಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಾರಿನಲ್ಲಿ ಮತದಾರರಿಗೆ ಹಂಚಲು ಹಣವಿತ್ತು ಎಂಬ ಸಂಶಯವಿದೆ. ಆದರೂ, ಚುನಾವಣಾಧಿಕಾರಿಗಳು ತನಿಖೆ ನಡೆಸಿಲ್ಲ ಎಂದು ದೂರಿನಲ್ಲಿ ಪ್ರಶ್ನಿಸಲಾಗಿದೆ. ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಸಿಎಂ ಪುತ್ರ ಬಿ.ವೈ.ರಾಘವೇಂದ್ರ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ ಬಳಿಕ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿ ಸಂಜೀವ್ ಕುಮಾರ್, ಬಿಜೆಪಿ ನಾಯಕರು ಉಪ ಚುನಾವಣೆಯಲ್ಲಿ ಹೇಗಾದರೂ ಗೆಲ್ಲಬೇಕೆಂದು ಅಕ್ರಮ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಇವಿಎಂಗಳನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಯಿದ್ದು, ಎಲ್ಲ ಕ್ಷೇತ್ರಗಳಲ್ಲಿ ಇವಿಎಂ ಹಾಗೂ ವಿವಿ ಪ್ಯಾಟ್‌ಗಳನ್ನು ಪರಿಶೀಲಿಸಲು ಅವಕಾಶ ನೀಡಿಲ್ಲ ಎಂದರು.







