ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು, ನ.23: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಓರ್ವನನ್ನು ಕೊಲೆಗೈದಿರುವ ಘಟನೆ ಇಲ್ಲಿನ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನಿವಾಸಿ ಅಂಬರೇಶ್ (32) ಕೊಲೆಯಾದ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಕಂಪೆನಿಯಲ್ಲಿ ಕಾರು ಚಾಲಕನಾಗಿದ್ದ ಅಂಬರೇಶ್ ಮತ್ತು ಈತನ ಸ್ನೇಹಿತ ಸಂದೀಪ್, ಶುಕ್ರವಾರ ರಾತ್ರಿ ಮದ್ಯಪಾನ ಮಾಡಿದ್ದಾರೆ. ಈ ವೇಳೆ, ಹಳೇ ವಿಷಯಗಳಿಗೆ ಸಂಬಂಧಪಟ್ಟಂತೆ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಅಂಬರೇಶ್ ಮೇಲೆ ಸಂದೀಪ್ ಗಂಭೀರವಾಗಿ ಹಲ್ಲೆ ನಡೆಸಿ, ಕೊಲೆಗೈದಿದ್ದಾನೆ ಎಂದು ಹೇಳಲಾಗುತ್ತಿದೆ.
ಘಟನೆ ಬಳಿಕ, ಆರೋಪಿ ಸಂದೀಪ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಡಿಜೆಹಳ್ಳಿ ಠಾಣಾ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
Next Story





