ಹುಳಿಮಾವು ದುರಂತ; ಬಡ ಕುಟುಂಬಗಳಿಗೆ ತಲಾ 50,000 ರೂ. ಪರಿಹಾರ: ಯಡಿಯೂರಪ್ಪ

ಬೆಂಗಳೂರು, ನ.26: ಹುಳಿಮಾವು ಕೆರೆ ಅನಾಹುತದಿಂದ ಮನೆ ಕಳೆದುಕೊಂಡ 319 ಬಡ ಕುಟುಂಬಗಳಿಗೆ ಪರಿಹಾರ ಧನವಾಗಿ ತಲಾ 50,000 ರೂ. ಗಳನ್ನು ಕೂಡಲೇ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಹುಳಿಮಾವು ಕೆರೆ ಅನಾಹುತದಿಂದ ನೆಲೆ ಕಳೆದುಕೊಂಡ ಸಂತ್ರಸ್ತರನ್ನು ಭೇಟಿ ಮಾಡಿ ಮಾತನಾಡಿದ ಅವರು, ಅನಾಹುತದಿಂದಾಗಿ ಒಟ್ಟು 630 ಮನೆಗಳು ಹಾನಿಗೊಳಗಾಗಿವೆ. ಈ ಪೈಕಿ ಬಡವರ ಮನೆಗಳು ಸಂಪೂರ್ಣ ನಾಶವಾಗಿವೆ. ನಿರಾಶ್ರಿತರ ಕೇಂದ್ರದಲ್ಲಿ ಸಂತ್ರಸ್ತರಿಗೆ ಊಟ ವಸತಿ ಸೌಲಭ್ಯಗಳು ಸೇರಿದಂತೆ ಎಲ್ಲ ರೀತಿಯ ನೆರವನ್ನು ಒದಗಿಸಲಾಗುತ್ತಿದೆ ಎಂದರು.
ಹಾನಿಗೊಳಗಾಗಿರುವ ಪ್ರದೇಶದಲ್ಲಿ ರಸ್ತೆಗಳ ನಿರ್ಮಾಣ, ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಸಂಬಂಧಪಟ್ಟ ಶಾಸಕರು, ಪಾಲಿಕೆ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಮುಂದೆ ಈ ರೀತಿಯ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಹಾಗೂ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಮೇಯರ್ ಎಂ.ಗೌತಮ್ ಕುಮಾರ್, ನಗರ ಪಾಲಿಕೆ ಸದಸ್ಯೆ ಭಾಗ್ಯಲಕ್ಷ್ಮಿ ಮುರಳಿ, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಉಪಸ್ಥಿತರಿದ್ದರು.







