ಸುಲಿಗೆ ಆರೋಪಿಗೆ ಗುಂಡಿಕ್ಕಿ ಬಂಧನ

ಬೆಂಗಳೂರು, ನ.26: ಸುಲಿಗೆ ಸೇರಿದಂತೆ ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯ ಕಾಲಿಗೆ ಪಿಸ್ತೂಲಿನಿಂದ ಗುಂಡು ಹೊಡೆದು ಬಂಧಿಸುವಲ್ಲಿ ಆರ್‌ಎಂಸಿ ಯಾರ್ಡ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಹಾಸನ ಮೂಲದ ದರ್ಶನ್(19) ಎಂಬಾತ ಆರೋಪಿಯಾಗಿದ್ದು, ಗುಂಡೇಟಿನಿಂದ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನ.24 ರಂದು ರಾತ್ರಿ 11.45 ಗಂಟೆಗೆ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಭಾಕರ್ ಕನ್ವೆನ್ಷನ್ ಸೆಂಟರ್ ಹಿಂಭಾಗದ ರಸ್ತೆಯಲ್ಲಿರುವ ಖಾಸಗಿ ಕಂಪೆನಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಸಿ, ನಗದು, ಬೈಕ್ ವಸೂಲಿ ಮಾಡಿದ್ದ ಆರೋಪದಡಿ ಇಲ್ಲಿನ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳವಾರ ಮುಂಜಾನೆ ಚಿಕ್ಕ ಬಾಣಾವರ ಕೆರೆಯ ರಸ್ತೆಯಲ್ಲಿ ಆರೋಪಿ ದರ್ಶನ್ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಆರ್‌ಎಂಸಿ ಯಾರ್ಡ್ ಠಾಣಾ ಪೊಲೀಸರು, ಆರೋಪಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಆದರೆ, ಹಲ್ಲೆ ಮಾಡಲು ದರ್ಶನ್ ಮುಂದಾದ ವೇಳೆ ಆತ್ಮರಕ್ಷಣೆಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎನ್ನಲಾಗಿದೆ.
ಬಂಧಿತ ದರ್ಶನ್, ಈ ಹಿಂದೆ ಆರ್‌ಎಂಸಿಯಾರ್ಡ್ ಪೊಲೀಸ್ ಠಾಣೆ ಫೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದು, ಈತನ ಮೇಲೆ ವಾರೆಂಟ್ ಇದೆ. ಜತೆಗೆ ವಿವಿಧ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.





