ಮಂಗಳೂರು: ಕಾನೂನು ಸುವ್ಯವಸ್ಥೆ; ಉನ್ನತ ಮಟ್ಟದ ಸಭೆ

ಮಂಗಳೂರು, ಡಿ.18: ದ.ಕ. ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿ ಪರಿಶೀಲಿಸಲು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಯಿತು.
ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಮಾತನಾಡಿ, ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತನಾಡಿ, ಎಲ್ಲ ಇಲಾಖಾಧಿಕಾರಿಗಳು ತಮ್ಮ ಹಂತದಲ್ಲಿ ಸುವ್ಯವಸ್ಥೆ ಪರಿಶೀಲಿಸಬೇಕು. ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ಧಾರ್ಮಿಕ ಸ್ಥಳ, ಪ್ರಾರ್ಥನಾಲಯಗಳಲ್ಲಿ ಯಾವುದೇ ಅನಪೇಕ್ಷಿತ ಚಟುವಟಿಕೆಗಳಿಗೆ ಅವಕಾಶ ಇಲ್ಲದಂತೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಡಿಸಿಪಿ ಅರುಣಾಂಶು ಗಿರಿ, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ನಗರಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.








