ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ನೆರವು: ಸಿಎಂ ಯಡಿಯೂರಪ್ಪ

ಬೆಂಗಳೂರು, ಡಿ.18: ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಹೆಚ್ಚಿನ ಹಣಕಾಸು ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ.
ಕರ್ನಾಟಕ ಪ್ರವಾಸೋದ್ಯಮ ನೀತಿ 2020-25 ಕುರಿತ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರಮಟ್ಟದಲ್ಲಿ ರಾಜ್ಯದ ಪ್ರವಾಸೋದ್ಯಮವನ್ನು ಮೊದಲ ಐದನೇ ಸ್ಥಾನಕ್ಕೆ ತರಲು ಸರಕಾರ ಬದ್ಧವಾಗಿದೆ. ಅದಕ್ಕೆ ಅಗತ್ಯವಾದ ಹಣಕಾಸು ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಹೇಳಿದರು.
ಮುಂದಿನ 6-7 ತಿಂಗಳಲ್ಲಿ ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ. ರಾಷ್ಟ್ರೀಯ ಹಾಗೂ ಅಂತರ್‌ರಾಷ್ಟ್ರೀಯ ಪ್ರವಾಸಿಗರನ್ನು ರಾಜ್ಯದ ಪ್ರವಾಸಿತಾಣಗಳಿಗೆ ಆಕರ್ಷಿಸಲು ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ. ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ 105 ಕೋಟಿ ರೂ.ವೆಚ್ಚದಲ್ಲಿ ನೂತನ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹತಿ ನೀಡಿದರು.
ರಾಜ್ಯದಲ್ಲಿ ಪ್ರವಾಸಿಗರನ್ನು ಸೆಳೆಯಲು ಪೂರಕ ವಾತಾವರಣ ನಿರ್ಮಾಣವಾಗಬೇಕಿದೆ. ಅದಕ್ಕಾಗಿ ಇಂದು ಸಮಾವೇಶಗೊಂಡಿರುವ ಪಾಲುದಾರರು ಸರಕಾರದ ಜತೆಗೆ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕೋರಿದರು.
ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮಾತನಾಡಿ, ನಮ್ಮ ಹಿರಿಯರು ಬಿಟ್ಟು ಹೋದ ಪ್ರವಾಸಿ ತಾಣಗಳನ್ನು ಸಂರಕ್ಷಿಸಿ ಪ್ರೋತ್ಸಾಹಿಸಬೇಕು. ಅದರ ಜತೆಗೆ ಹೊಸ ಪೀಳಿಗೆಯನ್ನು ಆಕರ್ಷಿಸಲು ಮತ್ತಷ್ಟು ಪ್ರವಾಸಿ ತಾಣಗಳನ್ನು ಹುಟ್ಟು ಹಾಕಲು ಆಲೋಚಿಸಲಾಗಿದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ರೋಪ್ ವೇ ಸೇರಿದಂತೆ ಹಲವಾರು ವಿಷಯಗಳನ್ನು ಕಳೆದ 20 ವರ್ಷಗಳಿಂದ ಹೇಳುತ್ತಲೇ ಬರಲಾಗಿದೆ. ಆದರೆ, ಇದನ್ನು ಬದಲಾಯಿಬೇಕಾಗಿದೆ 2020-25 ಪ್ರವಾಸೋದ್ಯಮ ನೀತಿಯಲ್ಲಿ ಏನು ಮಾಡಲು ಸಾಧ್ಯವಿದೆಯೋ ಅದನ್ನಷ್ಟೇ ಅಳವಡಿಸಲಾಗಿದೆ. ಅದನ್ನು ತಪ್ಪದೇ ಅನುಷ್ಠಾನ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಇನ್ಫೋಸಿಸ್ ಪ್ರತಿಷ್ಠಾನದ ಅದ್ಯಕ್ಷೆ ಸುಧಾಮೂರ್ತಿ, ಇಲಾಖೆಯ ಕಾರ್ಯದರ್ಶಿ ಅನಿಲ್ ಕುಮಾರ್ ಸೇರಿದಂತೆ ಹಲವರಿದ್ದರು.
.jpg)







