ಪೌರತ್ವ ಕಾಯ್ದೆಯನ್ನು ದೇಶದ ನಾಗರಿಕರು ವಿರೋಧಿಸಬೇಕು: ಕೆ.ನೀಲಾ
ಕೇಂದ್ರ ಸರಕಾರ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ

ಕಲಬುರ್ಗಿ, ಡಿ.18: ಎನ್‌ಆರ್‌ಸಿ ಮತ್ತು ಸಿಎಎ ವಿರೋಧಿಸಿ ಹಾಗೂ ಜಾಮಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಇಂದು ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಜನವಾದಿ ಮಹಿಳಾ ಸಂಘಟನೆ ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜನವಾದಿ ಮಹಿಳಾ ಸಂಘಟನೆಯ ಕೆ.ನೀಲಾ ಮಾತನಾಡಿ, ಪೌರತ್ವ ಕಾಯ್ದೆ ಸಂವಿಧಾನ ಮತ್ತು ದೇಶ ಒಡೆಯುವ ಮಸೂದೆಯಾಗಿದ್ದು, ಇದ್ದನ್ನು ಪ್ರತಿಯೊಬ್ಬ ಭಾರತೀಯ ನಾಗರಿಕ ವಿರೋಧಿಸಬೇಕು. ಈ ನೆಲದಲ್ಲಿ ಜನಿಸಿದ ನಾಗರಿಕರ ಬಳಿ ದಾಖಲೆ ಕೇಳುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ದಲಿತ ವಿದ್ಯಾರ್ಥಿ ಸಂಘಟನೆಯ ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ ಹಲ್ಲೆ ಹಾಗೂ ಎನ್‌ಆರ್‌ಸಿ ಮತ್ತು ಸಿಎಎ ವಿರೋಧಿಸಿ ಹಾಗೂ ವಿದ್ಯಾರ್ಥಿಗಳ ಮೇಲೆ ಪೊಲೀಸರ ಹಲ್ಲೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಜಿಲ್ಲಾಧ್ಯಕ್ಷ ಮುಹಮ್ಮದ್ ಸಮಾಮಾ ಮಾತನಾಡಿ, ಜಾಮಿಯಾ ಮತ್ತು ಎಎಂಯು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ನಾಚಿಕೆಗೇಡಿನ ಸಂಗತಿಯಾಗಿದೆ. ವಿದ್ಯಾರ್ಥಿಗಳ ನ್ಯಾಯಪರವಾದ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ತಿಳಿಸಿದರು.







