ಸಾವಿರ ಕೋಟಿ ರೂ. ನೀರಾವರಿ ಯೋಜನೆಗಳಿಗೆ ಶಂಕುಸ್ಥಾಪನೆ: ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ, ಡಿ.18: ಜಿಲ್ಲೆಯ ನವಲಗುಂದ ಹಾಗೂ ನರಗುಂದ ಸೇರಿದಂತೆ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳಿಗೆ ಸಾವಿರ ಕೋಟಿ ರೂ.ಗಳನ್ನು ನೀಡಲಾಗಿದೆ. ಈ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಬುಧವಾರ ಧಾರವಾಡ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ನೆರವೇರಿಸಲು ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತದೆ. ಒಂದಾದ ನಂತರ ಒಂದು ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು ಎಂದರು.
ಸರಕಾರ ರೈತನ ಒಳಿತಿಗಾಗಿ ಶ್ರಮಿಸುತ್ತಿದೆ. ಕೃಷಿ ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರಕುವಂತೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದ ಅವರು, ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತ ಪಕ್ಷಕ್ಕೆ 12 ಸ್ಥಾನಗಳಲ್ಲಿ ಗೆಲುವು ದೊರೆತಿರುವುದು, ಯಾವುದೇ ಅಡ್ಡಿ ಆತಂಕ ಇಲ್ಲದೆ ಮೂರುವರೆ ವರ್ಷಗಳ ಕಾಲ ಆಡಳಿತ ನೀಡಲು ಅವಕಾಶ ಕಲ್ಪಿಸಿದೆ. ಇನ್ನು ಆರು ತಿಂಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಬದಲಾವಣೆ ಮಾಡಲಿದ್ದೇವೆ. ಡಿಸೆಂಬರ್ ತಿಂಗಳ ಅಂತ್ಯದಲ್ಲಿ ದಿಲ್ಲಿಗೆ ತೆರಳಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಚರ್ಚಿಸಿದ ನಂತರ, ಪಕ್ಷವನ್ನು ಬೆಂಬಲಿಸಿ ಉಪಚುನಾವಣೆಯಲ್ಲಿ ಆಯ್ಕೆಯಾದ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗುವುದು.
ಸಮಸ್ಯೆ ಶೀಘ್ರ ಪರಿಹಾರ: ಕಳಸಾ-ಬಂಡೂರಿ ಮಹಾದಾಯಿ ಹೋರಾಟ ಬಹುದಿನಗಳದ್ದು, ಗೋವಾ ರಾಜ್ಯ ಹಾಗೂ ಕೇಂದ್ರ ಸರಕಾರದೊಂದಿಗೆ ಶೀಘ್ರವೇ ಸಮಾಲೋಚನೆ ನಡೆಸಿ ಆದಷ್ಟು ಬೇಗ ಸಮಸ್ಯೆ ಪರಿಹರಿಸಲಾಗುವುದು ಎಂದು ಬಿಎಸ್‌ವೈ ಹೇಳಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಗಣಿ ಮತ್ತು ವಿಜ್ಞಾನ ಸಚಿವ ಸಿ.ಸಿ.ಪಾಟೀಟ್ ಸೇರಿ ಸ್ಥಳೀಯ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
ಜ.3ಕ್ಕೆ ಸಂಪುಟ ವಿಸ್ತರಣೆ
‘ಪ್ರಧಾನಿ ಮೋದಿ 2020ರ ಜನವರಿ 2ರಂದು ರಾಜ್ಯಕ್ಕೆ ಆಗಮಿಸಲಿದ್ದು, ಜ.3ರಂದು ಬೃಹತ್ ಸಮಾವೇಶವನ್ನು ಏರ್ಪಡಿಸಿ ಸಚಿವ ಸಂಪುಟ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಾಲಯದೊಂದಿಗೆ ಚರ್ಚೆ ನಡೆಸಲಾಗುತ್ತಿದೆ’
-ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ
ನಿರ್ಭಯ ಪ್ರಕರಣದ ತೀರ್ಪಿಗೆ ಸ್ವಾಗತ ‘
ದಿಲ್ಲಿಯ ನಿರ್ಭಯ ಪ್ರಕರಣದ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿರುವುದು ಸ್ವಾಗತಾರ್ಹ. ತ್ವರಿತವಾಗಿ ಘಟನೆಯ ಬಗ್ಗೆ ನ್ಯಾಯಾಲಯ ತೀರ್ಪು ನೀಡಿರುವುದು. ಈ ತರಹದ ಕೃತ್ಯಗಳಲ್ಲಿ ಪಾಲ್ಗೊಳ್ಳುವವರಿಗೆ ಎಚ್ಚರಿಕೆ ಗಂಟೆಯಾಗಿದೆ’
-ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ







