ಮುಖ್ಯಮಂತ್ರಿ ಹೊಸದಿಲ್ಲಿ ಭೇಟಿ ಮುಂದೂಡಿಕೆ: ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ

ಬೆಂಗಳೂರು, ಡಿ.23: ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲು ಡಿ.21 ಅಥವಾ 22ರಂದು ಹೊಸದಿಲ್ಲಿಗೆ ತೆರಳುವುದಾಗಿ ಈ ಹಿಂದೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇದೀಗ ತಮ್ಮ ದಿಲ್ಲಿ ಪ್ರವಾಸವನ್ನು ಮುಂದೂಡಿದ್ದಾರೆ. ಇದರಿಂದ, ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತೆ ನಿರಾಸೆ ಅನುಭವಿಸುವಂತಾಗಿದೆ.
ಡಿ.5ರಂದು ನಡೆದ 15 ಕ್ಷೇತ್ರ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಡಿ.9ರಂದು ಚುನಾವಣಾ ಫಲಿತಾಂಶ ಪ್ರಕಟವಾಗಿದ್ದರೂ, ನಿನ್ನೆಯಷ್ಟೇ 13 ಮಂದಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲು ಇಷ್ಟು ದಿನ ವಿಳಂಬವಾಗಿದೆ ಎಂದು ಬಿಜೆಪಿ ಸದಸ್ಯ ಎಸ್.ಟಿ.ಸೋಮಶೇಖರ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಮುಖ್ಯಮಂತ್ರಿ ಹೊಸದಿಲ್ಲಿ ಭೇಟಿಯನ್ನು ಒಂದು ವಾರಗಳ ಕಾಲ ಮುಂದೂಡಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಹಾಗೂ ಸಂಪುಟದಲ್ಲಿ ಸ್ಥಾನ ಪಡೆಯುವ ವಿಚಾರದ ಕುರಿತು ಚರ್ಚಿಸಲು ಮಾಜಿ ಸಚಿವ ಎಚ್.ವಿಶ್ವನಾಥ್, ಇಂದು ಬೆಳಗ್ಗೆ ನಗರದ ಡಾಲರ್ಸ್ ಕಾಲನಿಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಅವರು ಚರ್ಚೆ ನಡೆಸಿದರು.







