ರಾಜ್ಯದ ಎಲ್ಲ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದಲು ಸುತ್ತೋಲೆ

ಬೆಂಗಳೂರು, ಜ. 1: ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ಪ್ರಾರ್ಥನಾ ಸಮಯದಲ್ಲಿ ಸಂವಿಧಾನದ ಪೀಠಿಕೆ ಓದಿ ಹೇಳಬೇಕು. ಅಲ್ಲದೆ, ಉಪಸ್ಥಿತರೆಲ್ಲರೂ ಪುನರುಚ್ಚರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಅಲ್ಲದೆ, ತಮ್ಮ ವ್ಯಾಪ್ತಿಯಲ್ಲಿರುವ ಸಂವಿಧಾನ ತಜ್ಞರನ್ನು ಶಾಲೆಗೆ ಆಹ್ವಾನಿಸಿ ಅವರಿಂದ ವಿಶೇಷ ಉಪನ್ಯಾಸ ಏರ್ಪಡಿಸುವ ಮೂಲಕ ಮಕ್ಕಳಲ್ಲಿ ಸಂವಿಧಾನದ ಬಗ್ಗೆ ಪೂರ್ಣ ಪರಿಜ್ಞಾನ ಹಾಗೂ ಬದ್ಧತೆ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.
2019ರ ಅಕ್ಟೋಬರ್ 28ರಂದು ‘ಸಂವಿಧಾನ ದಿನದ ಅಭಿಯಾನ’ ಸಂಬಂಧ ಸಿಎಂಸಿಎ ಸಂಸ್ಥೆ ಕೈಪಿಡಿ ಸಂಪೂರ್ಣ ನಾಶಪಡಿಸಬೇಕು. ಅಲ್ಲದೆ, ಆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿದ್ದು, ಈ ಸಂಸ್ಥೆ ಸಹಯೋಗದಲ್ಲಿ ಯಾವುದೇ ಕಾರ್ಯಕ್ರಮ ಹಮ್ಮಿಕೊಳ್ಳದಂತೆ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದೆ.
2019ರ ಡಿಸೆಂಬರ್ 19ರಂದು ಸಿಎಂ ಅಧ್ಯಕ್ಷತೆಯಲ್ಲಿ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ ಪದಾಧಿಕಾರಿಗಳೊಂದಿಗೆ ನಡೆದ ಸಭೆಯ ತೀರ್ಮಾನದಂತೆ ಸುತ್ತೋಲೆ ಹೊರಡಿಸಿದ್ದು, ಮೇಲಿನ ಎಲ್ಲ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಇಲಾಖೆ ಎಲ್ಲ ಅಧಿಕಾರಿಗಳು, ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಕರಿಗೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.