ಉಡುಪಿ: ಪಂಚಾಯತ್ ಚುನಾವಣೆಗೆ ಸನ್ನದ್ಧರಾಗಲು ಕಾಂಗ್ರೆಸಿಗರಿಗೆ ಕರೆ

ಉಡುಪಿ, ಜ.2: 2018ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರ ಪಡೆದ ನಂತರ ನಡೆದ ಚುನಾವಣೆಗಳಲ್ಲಿ 5 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಇದು ದೇಶಾದ್ಯಂತ ಬಿಜೆಪಿ ವಿರುದ್ಧ ಅಲೆ ಪ್ರಾರಂಭವಾಗಿರುವ ಸ್ಪಷ್ಟ ಸೂಚನೆಯಾಗಿದೆ. ಈ ಹಿನ್ನಲೆಯಲ್ಲಿ ಮುಂಬರುವ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಏನೇ ಭಿನ್ನಾಭಿಪ್ರಾಯವಿದ್ದರೂ ಅದನ್ನು ಬದಿಗಿರಿಸಿ ಪಕ್ಷದ ಗೆಲುವಿಗೆ ಶ್ರಮಿಸಬೇಕೆಂದು ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್‌ನ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.
ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ ಪಂಚಾಯತ್ ಚುನಾವಣೆಗಳಲ್ಲಿ ಸ್ಥಳಿಯ ವಿಚಾರಗಳೇ ಪ್ರಮುಖವಾಗಿರುವುದರಿಂದ ಬೂತು ಮಟ್ಟದಲ್ಲಿ ಮುಖಂಡತ್ವವನ್ನು ಗುರುತಿಸಿ, ಅಭ್ಯರ್ಥಿಗಳ ಆಯ್ಕೆ ಮಾಡಬೇಕಾಗಿದೆ. ಈಗಿಂದೀಗಲೇ ಗ್ರಾಪಂ ವ್ಯಾಪ್ತಿಯ ಸಮಿತಿಗಳನ್ನು ಪುನರ್ ರಚಿಸಿ, ಜಿಲ್ಲಾ ಸಮಿತಿಯಿಂದ ಗ್ರಾಮ ವ್ಯಾಪ್ತಿಗಳಿಗೆ ಉಸ್ತುವಾರಿಗಳನ್ನು ನೇಮಿಸಿ ಸಂಘಟನೆಯನ್ನು ಬಲಗೊಳಿಸಬೇಕಾಗಿದೆ. ಕಾಂಗ್ರೆಸ್ ಪಕ್ಷ ಕೇಂದ್ರ ಹಾಗೂ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಕೈಗೊಂಡ ಜನಪರ ಕಾರ್ಯಕ್ರಮ ಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ, ಜಿಲ್ಲಾ ವಕ್ತಾರ ಭಾಸ್ಕರ್‌ರಾವ್ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್, ಜಿಲ್ಲಾ ಐಟಿ ಸೆಲ್ ಅಧ್ಯಕ್ಷ ಸತೀಶ್ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಹರೀಶ್ ಶೆಟ್ಟಿ ಪಾಂಗಾಳ, ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್, ಜಿಲ್ಲಾ ಎಸ್‌ಟಿ ಘಟಕದ ಅಧ್ಯಕ್ಷ ಸುರೇಶ್ ನಾಯ್ಕಿ, ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಯತೀಶ್ ಕರ್ಕೇರ, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಶಶಿಧರ ಶೆಟ್ಟಿ ಎಲ್ಲೂರು ಮೊದಲಾದವರು ಉಪಸ್ಥಿತರಿದ್ದರು.







