ರಾಜ್ಯದ ಬೇಡಿಕೆಗಳಿಗೆ ಪ್ರಧಾನಿ ಮೋದಿ ಸ್ಪಂದಿಸಿದ್ದಾರೆ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಪೈಲ್ ಚಿತ್ರ
ಬೆಂಗಳೂರು, ಜ. 3: ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
‘ಹೊಸವರ್ಷದ ಪ್ರಾರಂಭದಲ್ಲಿಯೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿಯವರ ಘನ ಉಪಸ್ಥಿತಿಯಲ್ಲಿ ನಡೆದ ರೈತ ಸಮಾವೇಶದಲ್ಲಿ ರಾಜ್ಯದ ಸಿಎಂ ಆಗಿ ನಮ್ಮ ಅಹವಾಲನ್ನು ದೇಶದ ಪ್ರಧಾನಿಗೆ ಸಲ್ಲಿಸಿದ್ದೇನೆ. ಇದು ನಮ್ಮ ಪ್ರಜಾಪ್ರಭುತ್ವದಲ್ಲಿ ಸಹಜವಾಗಿ ನಡೆಯುವಂತಹ ವಿದ್ಯಮಾನ. ಆದರೆ, ಕೆಲ ಮಾಧ್ಯಮಗಳಲ್ಲಿ ವಿಷಯವನ್ನು ತಿರುಚಿ 'ಪ್ರಧಾನಿ ನಮ್ಮ ಬೇಡಿಕೆಗೆ ಮೌನವಹಿಸಿದ್ದರು, ಅವರು ಮುನಿಸಿಕೊಂಡಿದ್ದಾರೆ, ಅವರಿಗೆ ಅಸಮಾಧಾನವಾಗಿದೆ' ಎಂದು ವಾಸ್ತವ ಸಂಗತಿಗಳನ್ನು ತಿಳಿಯುವ ಗೋಜಿಗೂ ಹೋಗದೆ, ತಮ್ಮ ಕಪೋಲಕಲ್ಪಿತ ವ್ಯಾಖ್ಯಾನಗಳನ್ನು ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಸತ್ಯಕ್ಕೆ ದೂರವಾದವುಗಳು ಎನ್ನುವುದನ್ನು ನಾನು ಅತ್ಯಂತ ಸ್ಪಷ್ಟವಾಗಿ ಹೇಳುತ್ತಿದ್ದೇನೆ’ ಎಂದು ಬಿಎಸ್ವೈ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ ಮೋದಿ ನಮ್ಮ ರಾಜ್ಯದ ಬೇಡಿಕೆಗಳನ್ನು ಸ್ವೀಕರಿಸಿದ್ದಾರೆ. ನಮ್ಮ ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು, ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ನೆರವು -ಇದೆಲ್ಲವುಗಳಿಗೆ 50 ಸಾವಿರ ಕೋಟಿ ರೂ.ವಿಶೇಷ ಅನುದಾನ ನೀಡಬೇಕೆಂಬ ಮನವಿಯನ್ನು ರೈತ ಸಮಾವೇಶದ ವೇದಿಕೆಯಿಂದ ಅರಿಕೆ ಮಾಡಿಕೊಳ್ಳುವುದು ಸಮಂಜಸ ಎನ್ನುವ ಕಾರಣಕ್ಕೆ ಅಲ್ಲಿ ಅದನ್ನು ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ದಕ್ಷ, ಪಾರದರ್ಶಕ, ಪ್ರಾಮಾಣಿಕ ಆಡಳಿತ ವೈಖರಿ ಇಡೀ ಜಗತ್ತಿಗೆ ಗೊತ್ತಿದೆ. ಇಡೀ ದೇಶಕ್ಕೆ ತಿಳಿದಿರುವಂತೆ, ಮೋದಿ ಸರಕಾರ ರೈತರಿಗೆ ಅಭೂತಪೂರ್ವ ನೆರವು ನೀಡಿದೆ, ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಿ, ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿ ಹೆಜ್ಜೆಗಳನ್ನು ಇಡುತ್ತಿದೆ. ನಮ್ಮ ರಾಜ್ಯದ ಕೃಷಿಕರ, ನೀರಾವರಿ ಯೋಜನೆಗಳ ವಾಸ್ತವತೆಗಳೂ ಪ್ರಧಾನಿಗೆ ತಿಳಿದಿದೆ. ಅವರು ನಮ್ಮ ಅತ್ಯುನ್ನತ ನಾಯಕರು. ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ನೆರವು, ಅನುದಾನ ನೀಡಿರುವುದು ಪ್ರಧಾನಿ ಮೋದಿಯವರೇ ಎನ್ನುವುದೂ ಎಲ್ಲರಿಗೂ ತಿಳಿದಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ನಮ್ಮ ಎಲ್ಲ ಮನವಿಗೆ ಪ್ರಧಾನಿ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಈ ಬಗ್ಗೆ ಹೊಸದಿಲ್ಲಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲು ಮತ್ತು ಇಲಾಖಾವಾರು ಕೇಂದ್ರ ಸಚಿವರುಗಳಿಗೆ ಪ್ರಸ್ತಾವನೆ ಸಲ್ಲಿಸಲು ಪ್ರಧಾನಿ ಸೂಚಿಸಿದ್ದಾರೆ. ಪ್ರಧಾನಿ ಈ ವಿಷಯದ ಬಗ್ಗೆ ಖುದ್ದಾಗಿ ನನ್ನೊಂದಿಗೆ ಮಾತನಾಡಿದ್ದಾರೆಂದು ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ವಾಸ್ತವ ಸಂಗತಿಗಳನ್ನು ಮರೆಮಾಚಿ, ಜನರಿಗೆ ತಪ್ಪುಸಂದೇಶ ನೀಡುವ ಕೆಲವು ಮಾಧ್ಯಮಗಳ ಧೋರಣೆ ಸಲ್ಲ ಎನ್ನುವುದನ್ನು ಇಲ್ಲಿ ಸ್ಪಷ್ಟಪಡಿಸಲು ಬಯಸುತ್ತೇನೆ. ರಾಜ್ಯದ ಹಿತದೃಷ್ಟಿಯಿಂದ ನಮ್ಮ ಪ್ರಯತ್ನಗಳನ್ನು ಬೆಂಬಲಿಸಿ ಮತ್ತು ವಿಷಯಗಳಿಗೆ ತಪ್ಪುವಾಖ್ಯಾನ ಮಾಡದಿರಿ ಎಂದು ಮಾಧ್ಯಮಗಳಲ್ಲಿ ನಾನು ಕೋರಿಕೊಳ್ಳುತ್ತಿದ್ದೇನೆ’
-ಯಡಿಯೂರಪ್ಪ, ಮುಖ್ಯಮಂತ್ರಿ







