ಜ.8ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ

ಇಂದು ರಾಜ್ಯಾದ್ಯಂತ ಕಾರ್ಮಿಕ ಮುಷ್ಕರಕ್ಕೆ ಕರೆ
ಬೆಂಗಳೂರು, ಜ.7: ಕನಿಷ್ಠ ವೇತನ ನಿಗದಿ, ನೂತನ ಪಿಂಚಣಿ ಯೋಜನೆ ರದ್ದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಇಂದು ಕೇಂದ್ರದ 11 ಕಾರ್ಮಿಕ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು, ರಾಜ್ಯದಲ್ಲಿಯೂ ಮುಷ್ಕರದ ಬಿಸಿ ತಟ್ಟಲಿದೆ.
ದೇಶದಾದ್ಯಂತ ನಡೆಯುತ್ತಿರುವ ಮುಷ್ಕರಕ್ಕೆ ತಮ್ಮದೇ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಟೋ ಚಾಲಕರು, ಸಾರಿಗೆ ನೌಕರರು, ವಿದ್ಯಾರ್ಥಿ-ಯುವಜನ ಸಂಘಟನೆಗಳು, ವ್ಯಾಪಾರಿ ಒಕ್ಕೂಟಗಳು, ರೈತ ಸಂಘಟನೆಗಳು ಸೇರಿದಂತೆ ಹಲವು ವರ್ಗಗಳ ಕಾಮಿಕರ್ ಸಂಘಟನೆಗಳು ಬೆಂಬಲ ಘೋಷಿಸಿವೆ.
ಮುಷ್ಕರವನ್ನು ಭಾರತ್ ಬಂದ್ ಎಂಬಂತೆ ಬಿಂಬಿಸಲಾಗಿದೆ. ಇದು ಬಂದ್ ಅಲ್ಲ, ಬಸ್, ಆಟೋ, ಟ್ಯಾಕ್ಸಿ, ಸರಕು ಸಾಗಣೆ, ಬ್ಯಾಂಕಿಂಗ್ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ. ಶಾಲೆ, ಕಾಲೇಜು, ಕಚೇರಿಗಳು ಎಂದಿನಂತೆಯೇ ಕಾರ್ಯ ನಿರ್ವಹಿಸಲಿವೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘಟನೆಗಳು, ಆಟೊ, ಟ್ಯಾಕ್ಸಿ, ಕ್ಯಾಬ್ ಮತ್ತು ಸರಕು ಸಾಗಣೆ ಚಾಲಕರು ಮತ್ತು ಮಾಲಕರ ಸಂಘಗಳು ಮುಷ್ಕರಕ್ಕೆ ಬಾಹ್ಯ ಬೆಂಬಲ ನೀಡಿವೆ. ಆದರೆ, ಸೇವೆ ಸ್ಥಗಿತಗೊಳಿಸಿ, ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ. ಹಾಗಾಗಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ರಾಜ್ಯಾದ್ಯಂತ ಇಂದು ನಡೆಯಲಿರುವ ಮುಷ್ಕರದಲ್ಲಿ ಲಕ್ಷಾಂತರ ಕಾರ್ಮಿಕರು ಬೀದಿಗಿಳಿಯಲಿದ್ದಾರೆ. ಬೆಂಗಳೂರಿನ ವಿವಿಧ ಕಡೆಗಳಲ್ಲಿ ಬೃಹತ್ ಮಟ್ಟದ ಕಾರ್ಮಿಕರ ರ್ಯಾಲಿ ನಡೆಯಲಿದೆ. ಇಲ್ಲಿನ ಪುರಭವನದಿಂದ ಸ್ವಾತಂತ್ರ ಉದ್ಯಾನದವರೆಗೂ ಕಾರ್ಮಿಕರ ರ್ಯಾಲಿ ನಡೆಯಲಿದೆ. ಅಲ್ಲಿ, ಬೃಹತ್ ಬಹಿರಂಗ ಸಭೆ ನಡೆಸುವ ಮೂಲಕ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕೇಂದ್ರ ಸರಕಾರಕ್ಕೆ ಒತ್ತಾಯಿಸಲಾಗುವುದು ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ತಿಳಿಸಿದ್ದಾರೆ.
ಕೇಂದ್ರ ಕಾರ್ಮಿಕ ಸಂಘಟನೆಗಳು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಾಳೆ(ಜ.8) ರಾಜ್ಯದ ಶಾಲಾ-ಕಾಲೇಜುಗಳಿಗೆ ರಜೆ ನೀಡುವುದಿಲ್ಲ. ಅದರ ಬದಲಿಗೆ, ಎಲ್ಲ ಕಡೆಗಳಲ್ಲಿ ಬಿಗಿ ಭದ್ರತೆ ಒದಗಿಸುವ ಕೆಲಸ ಮಾಡಲಾಗುವುದು. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಬಿಗಿ ಭದ್ರತೆ ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
-ಸುರೇಶ್ ಕುಮಾರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ
ಅನುಮತಿ ನಿರಾಕರಣೆ
ಕಾರ್ಮಿಕ ಸಂಘಟನೆಗಳು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಯಾವುದೇ ಮೆರವಣಿಗೆ ನಡೆಸಲು ಅನುಮತಿ ನಿರಾಕರಣೆ ಮಾಡಲಾಗಿದೆ. ಕಾರ್ಮಿಕ ಸಂಘಟನೆಗಳು ಏನು ಮಾಡುವುದಿದ್ದರೂ, ಸ್ವಾತಂತ್ರ ಉದ್ಯಾನವನದಲ್ಲಿ ಮಾಡಬೇಕು. ಅನಾಹುತಗಳಾದರೆ ಆಯೋಜಕರೇ ಹೊಣೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಹೇಳಿದ್ದಾರೆ.
ಕೆಲವರು ಬಂದ್‌ಗೆ ಕರೆ ಕೊಟ್ಟಿರುವುದಾಗಿ ಭಾವಿಸಿದ್ದಾರೆ. ಬಸ್, ಆಟೋ, ಟ್ಯಾಕ್ಸಿ, ಸರಕು ಸಾಗಣೆ ವಾಹನಗಳ ಸೇವೆ ಸ್ಥಗಿತಗೊಳಿಸುವುದಿಲ್ಲ. ಕಾರ್ಖಾನೆಗಳಲ್ಲಿ ಉತ್ಪಾದನೆ ಸ್ಥಗಿತಗೊಳ್ಳಲಿದೆ. ಉಳಿದಂತೆ ಯಾವುದೇ ಸೇವೆಗಳು ಬಂದ್ ಆಗುವುದಿಲ್ಲ. ಸಾರಿಗೆ ಸಂಸ್ಥೆ ನೌಕರರು ಅಲ್ಲಲ್ಲಿ ಧರಣಿ ನಡೆಸಲಿದ್ದಾರೆ.
-ಎಚ್.ವಿ. ಅನಂತಸುಬ್ಬರಾವ್, ಎಐಟಿಯುಸಿ ಪ್ರಧಾನ ಕಾರ್ಯದರ್ಶಿ







