ರಾಜ್ಯಕ್ಕೆ ಆಗಮಿಸಿದ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು

ಬೆಂಗಳೂರು, ಜ. 6: ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಎರಡು ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಹೊಸದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದಾರೆ.
ನಗರದ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಅವರನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹೂವಿನ ಮಾಲೆಹಾಕಿ, ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸದಸ್ಯ ಪಿ.ಸಿ.ಮೋಹನ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ ರಾವ್, ಸಂಚಾರ ವಿಭಾಗದ ಪೊಲೀಸ್ ಆಯುಕ್ತ ಬಿ.ಆರ್.ರವಿಕಾಂತೇಗೌಡ ಈ ವೇಳೆ ಹಾಜರಿದ್ದರು.
ವೆಂಕಯ್ಯನಾಯ್ಡು ನಾಳೆ(ಜ.7) ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು ಬೆಳಗ್ಗೆ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಸ್ವಾಮಿ ಅವರ ಬೃಂದಾವನ ಭೇಟಿ, ಅದಮ್ಯ ಚೇತನ ಗ್ರೀನ್ ಕಿಚನ್ ಭೇಟಿ, ರಾಜಭವನದಲ್ಲಿ ಹಮ್ಮಿಕೊಂಡಿರುವ ‘ಎನ್‌ಎಎಸಿ’ ಬೆಳ್ಳಿಹಬ್ಬ ಹಾಗೂ ಕೃಷಿ ವಿವಿ ಆವರಣದ ನಡೆಯುವ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.





