ಅಕ್ರಮ ಧಾರ್ಮಿಕ ಶ್ರದ್ಧಾ ಕೇಂದ್ರ ತೆರವಿಗೆ ವಿಳಂಬ: ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಅಸಮಾಧಾನ

ಬೆಂಗಳೂರು, ಜ.6: ಶಾಲೆ, ಉದ್ಯಾನ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ದೇವಸ್ಥಾನ, ಚರ್ಚ್, ಮಸೀದಿ, ಗುರುದ್ವಾರ ಹಾಗೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಹಾಗೂ ಹೈಕೋರ್ಟ್ ಆದೇಶವನ್ನು ಪಾಲಿಸುವಲ್ಲಿ ವಿಫಲವಾಗಿದ್ದಕ್ಕೆ ಹೈಕೋರ್ಟ್ ರಾಜ್ಯ ಸರಕಾರದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದ್ರನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಸರಕಾರದ ಮುಖ್ಯ ಕಾರ್ಯದರ್ಶಿಗೆ ಫೆ.4ರಂದು ಹೊಸದಾಗಿ ಪ್ರಮಾಣಪತ್ರ ಸಲ್ಲಿಸಲು ಸೂಚಿಸಿತು. ನ್ಯಾಯಪೀಠವು ವಿಚಾರಣೆ ವೇಳೆ, ರಸ್ತೆ, ಉದ್ಯಾನವನ ಮತ್ತಿತರ ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿಕೊಂಡು ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳ ತೆರವಿಗೆ ಕ್ರಮ ಕೈಗೊಳ್ಳದ ರಾಜ್ಯ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು. ಧಾರ್ಮಿಕ ಶ್ರದ್ಧಾ ಕೇಂದ್ರಗಳ ಹೆಸರಿನಲ್ಲಿ ಅಕ್ರಮ ಮುಂದುವರಿಸಲು ಅವಕಾಶ ನೀಡುವುದು ಎಷ್ಟರ ಮಟ್ಟಿಗೆ ಸರಿ? ಸರಕಾರಕ್ಕೆ ಅಕ್ರಮ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ನಿಜವಾಗಿಯೂ ಇಚ್ಛಾಶಕ್ತಿ ಇಲ್ಲವೇ ಎಂದು ಸರಕಾರಕ್ಕೆ ಪ್ರಶ್ನೆ ಮಾಡಿತು.
ನಂತರ ಅಕ್ರಮ ಧಾರ್ಮಿಕ ಕೇಂದ್ರಗಳನ್ನು ಗುರುತಿಸಲು ಮಾ.31ರವರೆಗೆ ಕಾಲಾವಕಾಶ ಕೋರಿರುವ ಸರಕಾರದ ಮುಖ್ಯ ಕಾರ್ಯದರ್ಶಿ ಪ್ರಮಾಣಪತ್ರ ತಿರಸ್ಕಾರ ಮಾಡಿ ಹೊಸದಾಗಿ ಪ್ರಮಾಣಪತ್ರ ಸಲ್ಲಿಸಲು ಫೆ.4ಕ್ಕೆ ಸೂಚಿಸಿ ವಿಚಾರಣೆ ಮುಂದೂಡಿಕೆ ಮಾಡಿದೆ. ಫೆ.4ರಂದು ಹೊಸದಾಗಿ ಪ್ರಮಾಣಪತ್ರ ಸಲ್ಲಿಸಲು ಸೂಚಿಸಿತು.





