ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಕೃತ್ಯದ ಹಿಂದೆ ಮೋದಿ, ಶಾ: ಕಾಂಗ್ರೆಸ್ ಆರೋಪ

ಬೆಂಗಳೂರು, ಜ. 7: ಹೊಸದಿಲ್ಲಿ ಜೆಎನ್‌ಯು ವಿದ್ಯಾರ್ಥಿ ಮತ್ತು ಪ್ರಾಧ್ಯಾಪಕರ ಮೇಲಿನ ಕೃತ್ಯದ ಹಿಂದೆ ಮೋದಿ ಮತ್ತು ಅಮಿತ್ ಶಾ ಇದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃತ್ಯದ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಪೊಲೀಸರು ಮೌನ ವಹಿಸಿದ್ದು, ಜೆಎನ್‌ಯು ವಿದ್ಯಾರ್ಥಿಗಳ ಧ್ವನಿಯನ್ನು ಅಡಗಿಸಲು ದಾಳಿ ನಡೆಸಲಾಗಿದೆ ಎಂದು ದೂರಿದರು.
ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಜೆಎನ್‌ಯು ಮೇಲಿನ ಹಲ್ಲೆ ಹಿನ್ನೆಲೆಯಲ್ಲಿ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ದೇಶದ ಮರ್ಯಾದೆ ಹರಾಜು ಆಗಿದೆ ಎಂದ ಅವರು, ವಿದ್ಯಾರ್ಥಿಗಳ ಮೇಲಿನ ಮಾರಣಾಂತಿಕ ಹಲ್ಲೆಯಿಂದ ಇಡೀ ದೇಶ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದರು.
ನಾಝಿ ಆಡಳಿತದ ನೆನಪು: ಪೌರತ್ವ ಕಾಯ್ದೆ ವಿರೋಧಿಸಿ ವಿವಿ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಬೀದಿಗೆ ಇಳಿಯುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಧ್ವನಿಯನ್ನು ಅಡಗಿಸಲು ಹಲ್ಲೆ ನಡೆಸಲಾಗಿದೆ. ಇದನ್ನು ನೋಡಿದರೆ ಜರ್ಮನಿಯ ನಾಝಿ ಆಡಳಿತ ನೆನಪಿಸುತ್ತಿದೆ ಎಂದು ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.





