ವಿವಿಧ ಕಾರ್ಮಿಕ ಸಂಘಟನೆಗಳಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು, ಜ.8: ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳನ್ನು ಪುನಶ್ಚೇತನಗೊಳಿಸಬೇಕು. 21 ಸಾವಿರ ರೂ. ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕೆಂದು ಪಟ್ಟುಹಿಡಿದು ವಿವಿಧ ಕಾರ್ಮಿಕ ಸಂಘಟನೆಗಳು ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು.
ಬುಧವಾರ ನಗರದ ಫ್ರೀಡಂ ಪಾರ್ಕಿನ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಸಾವಿರಾರು ಕಾರ್ಮಿಕರು ಕೇಂದ್ರ ಸರಕಾರ ವಿರುದ್ಧ ಘೋಷಣೆಗಳನ್ನು ಕೂಗಿದಿದರು. ಅಲ್ಲದೆ, ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯುನ ಮೀನಾಕ್ಷಿ ಸುಂದರಂ, ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಗುತ್ತಿಗೆ ಪದ್ದತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು. ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಜಾರಿಯಾಗುವಂತಹ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮಿ ಮಾತನಾಡಿ, ಕೇಂದ್ರ ಸರಕಾರ ರೈತರು, ಕಾರ್ಮಿಕರ ಪರವಾದ ಯಾವುದೇ ಕಾರ್ಯಕ್ರಮಗಳನ್ನು ರೂಪಿಸುತ್ತಿಲ್ಲ. ಅಲ್ಲದೆ, ಭಾವನಾತ್ಮ ವಿಷಯಗಳನ್ನು ಮುನ್ನಲೆಗೆ ತಂದು ಜನರ ಗಮನವನ್ನು ಬೇರೆಡೆ ಸೆಳೆಯುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ. ದಿನಗೂಲಿ ನೌಕರರನ್ನು ಕನಿಷ್ಟ ವೇತನವನ್ನೂ ನೀಡುತ್ತಿಲ್ಲ. ಪರಿಣಾಮ ಜನ ಜೀವನ ನಡೆಸುವುದಕ್ಕೂ ಸಾಧ್ಯವಾಗದಂತಾಗಿದೆ ಎಂದು ಆರೋಪಿಸಿದರು.
ಪುರಭವನದ ಮುಂದೆ ಪ್ರತಿಭಟನೆ: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರಕ್ಕೆ ಕೆನರಾ ಬ್ಯಾಂಕ್ ಸ್ಟಾಫ್ ಫೆಡರೇಶನ್‌ನ ಸದಸ್ಯರು ಬೆಂಬಲ ವ್ಯಕ್ತ ಪಡಿಸಿ ಪ್ರತಿಭಟಿಸಿದರು.
ನಗರದ ಪುರಭವನದ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ಬ್ಯಾಂಕ್ ನೌಕರರು ನೂರಾರು, ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ವಾಟಾಳ್ ವಶಕ್ಕೆ
ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಪ್ರತಿಭಟನೆ ನಡೆಸುವುದಕ್ಕೆ ಮುಂದಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದರು. ನಗರದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ನ್ನು ತಡೆದು ಪ್ರತಿಭಟನೆ ನಡೆಸಲು ವಾಟಾಳ್ ಮುಂದಾದ ವೇಳೆ ಪೊಲೀಸರು ಅವಕಾಶ ನೀಡದೆ ವಶಕ್ಕೆ ಪಡೆದರು.
‘ಪೊಲೀಸ್ ಆಯುಕ್ತ ಸರಕಾರದ ಅಡಿಯಾಳು’
ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ರಾಜ್ಯ ಸರಕಾರದ ಅಡಿಯಾಳಾಗಿ ಕೆಲಸ ಮಾಡುತ್ತಿದ್ದಾರೆ. ಐಪಿಎಸ್ ಅಧಿಕಾರಿಯಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳು ಅವರಿಗೆ ತಿಳಿದಿಲ್ಲ. ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಮೆರವಣಿಗೆ ನಡೆಸುವುದಕ್ಕೆ ಅವಕಾಶ ನೀಡಲಿಲ್ಲ. ಇಂತಹ ಅಧಿಕಾರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ.
-ಮೀನಾಕ್ಷಿ ಸುಂದರಂ, ಕಾರ್ಮಿಕ ಸಂಘಟನೆ ಮುಖಂಡ







