ಕೆ.ಸಿ.ವ್ಯಾಲಿ ಯೋಜನೆ ವಿಚಾರ: ಪಿಐಎಲ್ ಅನ್ನು ಸ್ವಯಂಪ್ರೇರಿತ ಅರ್ಜಿಯಾಗಿ ಪರಿವರ್ತಿಸಿಕೊಂಡ ಹೈಕೋರ್ಟ್

ಬೆಂಗಳೂರು, ಜ.28: ಕೆ.ಸಿ.ವ್ಯಾಲಿ ಯೋಜನೆಯ ವಿಚಾರದಲ್ಲಿ ಸರಕಾರ ನೇಮಿಸಿದ ವಿಷಯ ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿಗಳ ಸದಸ್ಯರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ಸ್ವಯಂ ಪ್ರೇರಿತ ಅರ್ಜಿಯನ್ನಾಗಿ ಪರಿವರ್ತಿಸಿಕೊಂಡಿದೆ.
ಈ ಕುರಿತು ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿಯ ಆರ್.ಆಂಜನೇಯರೆಡ್ಡಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ನ್ಯಾಯಾಲಯಕ್ಕೆ ತಪ್ಪು ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸಿ ನ್ಯಾಯಾಲಯವನ್ನು ತಪ್ಪು ದಾರಿಗೆ ಎಳೆಯಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಮುಂದುವರಿಯುವ ಅರ್ಹತೆ ಕಳೆದುಕೊಂಡಿದ್ದಾರೆ. ಹೀಗಾಗಿ, ಅರ್ಜಿದಾರರು ಈ ಪ್ರಕರಣದಲ್ಲಿ ಮುಂದುವರಿಯುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಅಲ್ಲದೆ, ಕೆ.ಸಿ.ವ್ಯಾಲಿ ಯೋಜನೆಯ ಪರಿಸರ ಪರಿಣಾಮ ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸುವಂತೆ ಸರಕಾರಕ್ಕೆ ನಿರ್ದೇಶ ನೀಡಿದೆ. ಕೆ.ಸಿ.ವ್ಯಾಲಿ ಯೋಜನೆ ಪರಿಸರ ದುಷ್ಪರಿಣಾಮ ಅಧ್ಯಯನಕ್ಕೆ ನೇಮಿಸಿರುವ ವಿಷಯ ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿಯ ಕೆಲ ಸದಸ್ಯರು ಮೂಲ ಯೋಜನೆ ಸಿದ್ಧಪಡಿಸಿದ್ದಾರೆ ಎಂದು ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಷಯ ತಜ್ಞರು ಸಾಮಾನ್ಯ ಜನರಲ್ಲ. ಸಮಿತಿಯಲ್ಲಿ ಯಾರೂ ಸದಸ್ಯರಾಗಿರಬೇಕೆಂದು ಸರಕಾರಕ್ಕೆ ನೀವು ಸೂಚಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಪಿಐಎಲ್ ಅನ್ನು ಸ್ವಯಂ ಪ್ರೇರಿತ ಅರ್ಜಿಯನ್ನಾಗಿ ಪರಿವರ್ತಿಸಿಕೊಂಡಿದೆ.







