ಡಿಸಿಎಂಗಳ ಮುಂದುವರಿಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು: ಗೋವಿಂದ ಕಾರಜೋಳ

ಬೆಂಗಳೂರು, ಜ. 30: ಹಾಲಿ ಉಪಮುಖ್ಯಮಂತ್ರಿಗಳನ್ನು ಮುಂದುವರಿಸುವ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು, ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಳಂಬ ಆಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಹೊಸದಿಲ್ಲಿಗೆ ತೆರಳಿದ್ದು, ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಶೀಘ್ರವೇ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಲಿದೆ ಎಂದರು.
ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಪಕ್ಷದ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಸೋತವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.
ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆಯೂ ಹೈಕಮಾಂಡ್ ತೀರ್ಮಾನ ಮಾಡಲಿದ್ದು, ಅದಕ್ಕೆ ಎಲ್ಲರೂ ಬದ್ಧ. ಪಕ್ಷ ಅಂದರೆ ತಾಯಿ ಇದ್ದಂತೆ. ಸಂಪುಟ ವಿಸ್ತರಣೆ ಬಗ್ಗೆ ಬಿಎಸ್‌ವೈ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ ಎಂದು ಪುನರುಚ್ಚರಿಸಿದರು.