ಫೆ.17ಕ್ಕೆ ಮೇಲ್ಮನೆ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕೆ.ಪದ್ಮರಾಜನ್ ನಾಮಪತ್ರ ಸಲ್ಲಿಕೆ
ಬೆಂಗಳೂರು, ಫೆ. 3: ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಫೆ.17ಕ್ಕೆ ನಡೆಯಲಿರುವ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಡಾ.ಕೆ. ಪದ್ಮರಾಜನ್ ನಾಮಪತ್ರ ಸಲ್ಲಿಸಿದ್ದಾರೆ.
ಸೋಮವಾರ ವಿಧಾನಸೌಧ ಮೊದಲ ಮಹಡಿಯಲ್ಲಿನ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ, ತಮಿಳುನಾಡು ಮೂಲದ ಪದ್ಮರಾಜನ್ ನಾಮಪತ್ರ ಸಲ್ಲಿಸಿದ್ದು, ಅವರಿಗೆ ಸೂಚಕರಾಗಿ ಯಾವೊಬ್ಬ ಶಾಸಕರೂ ಸಹಿ ಹಾಕಿಲ್ಲ.
ರಿಝ್ವಾನ್ ಅರ್ಶದ್ ಅವರು ವಿಧಾನಸಭೆ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿರುವ ಮೇಲ್ಮನೆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಫೆ.6ರಂದು ಕಡೆಯ ದಿನವಾಗಿದ್ದು, ಆಡಳಿತಾರೂಢ ಬಿಜೆಪಿ, ವಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿ ರಾಜಕೀಯ ಪಕ್ಷಗಳ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ.
ಫೆ.6ಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆಂದು ಮೂಲಗಳು ತಿಳಿಸಿವೆ. ಒಂದೇ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್-ಜೆಡಿಎಸ್ ಚುನಾವಣೆಯಿಂದ ದೂರ ಉಳಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಫೆ.7ಕ್ಕೆ ನಾಮಪತ್ರ ಪರಿಶೀಲನೆ, ಫೆ.10ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅಗತ್ಯವಿದ್ದರೆ ಫೆ.17ರ ಬೆಳಗ್ಗೆ 9ರಿಂದ 4ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5ಕ್ಕೆ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ.







