ಜೂನ್ ಒಳಗಾಗಿ 3.5 ಲಕ್ಷ ಗ್ರಾಮೀಣ ಮನೆಗಳ ನಿರ್ಮಾಣ ಪೂರ್ಣ: ಮುಖ್ಯಮಂತ್ರಿ ಬಿಎಸ್‌ವೈ

ಬೆಂಗಳೂರು, ಫೆ.4: ರಾಜ್ಯದಲ್ಲಿ ಜಾರಿಯಿರುವ ಎಲ್ಲ ವಸತಿ ಯೋಜನೆಗಳಡಿ ಗ್ರಾಮಗಳಲ್ಲಿ ನಿರ್ಮಾಣ ಹಂತದಲ್ಲಿರುವ ಸುಮಾರು 3.5 ಲಕ್ಷ ಮನೆಗಳನ್ನು ಮುಂಬರುವ ಜೂನ್ ತಿಂಗಳ ಒಳಗಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಮಂಗಳವಾರ ಆನೇಕಲ್ ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.
ಬೆಂಗಳೂರು ನಗರದಲ್ಲಿ ವಾಸಿಸುತ್ತಿರುವ ಅಸಂಘಟಿತ ಹಾಗೂ ಆರ್ಥಿಕವಾಗಿ ಹಿಂದುಳಿದ ವಸತಿ ರಹಿತ ಫಲಾನುಭವಿಗಳಿಗೆ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.
ಕರ್ನಾಟಕ ಗೃಹ ಮಂಡಳಿ ವತಿಯಿಂದ 21 ಸಾವಿರ ನಿವೇಶನ ಅಭಿವೃದ್ಧಿ ಮತ್ತು 770 ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅಲ್ಲದೇ, ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ 83,119 ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಮುಖ್ಯಮಂತ್ರಿ ತಿಳಿಸಿದರು.
ಬೆಂಗಳೂರಿನ ಸುತ್ತಮುತ್ತಲಿನ ಪಟ್ಟಣ ಪ್ರದೇಶಗಳಿಗೆ ಅಳವಡಿಸಲು ಉದ್ದೇಶಿರುವ ಸ್ಯಾಟಲೈಟ್ ಟೌನ್ ವರ್ತುಲ ರಸ್ತೆ ಆನೇಕಲ್ ಮೂಲಕ ಹಾದು ಹೋಗಲಿದ್ದು, ಇದರಿಂದಾಗಿ ಇಲ್ಲಿನ ಜನರು ವಾಣಿಜ್ಯ ಚಟುವಟಿಕೆಗಳನ್ನು ಕೈಗೆತ್ತಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಅನುಕೂಲವಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.
ಬಿಬಿಎಂಪಿಗೆ ಹೊಂದಿಕೊಂಡಿರುವ ಬೆಂಗಳೂರು ನಗರ ಜಿಲ್ಲೆಯು ಅತ್ಯಂತ ವೇಗವಾಗಿ ನಗರೀಕರಣಗೊಳ್ಳುತ್ತಿದ್ದು, ಈ ಭಾಗದ ಗ್ರಾಮೀಣ ಪ್ರದೇಶಗಳಿಗೆ ಅತ್ಯುತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅತ್ಯಗತ್ಯ ಎಂಬುದನ್ನು ಸರಕಾರ ಮನವರಿಕೆ ಮಾಡಿಕೊಂಡಿದೆ. ಈ ಭಾಗದಲ್ಲಿ ಶುದ್ಧ ಕುಡಿಯುವ ನೀರು, ಅತ್ಯುತ್ತಮ ರಸ್ತೆಗಳನ್ನು ನೀಡಲು ಸರಕಾರ ಕಾರ್ಯಪ್ರವೃತ್ತವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಕೇಂದ್ರ ಸರಕಾರವು 2020-21ರ ಬಜೆಟ್‌ನಲ್ಲಿ ಬೆಂಗಳೂರು ನಗರದಲ್ಲಿ ಸಬ್ಅರ್ಬನ್ ರೈಲ್ವೆ ಕಾಮಗಾರಿ ಘೋಷಿಸಿದ್ದು, ಈ ಭಾಗದ ಹುಸ್ಕೂರು, ಸಿಂಗೇನ ಅಗ್ರಹಾರ, ಬೊಮ್ಮಸಂದ್ರ ಮೊದಲಾದ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಿದಂತಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು.
ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ರಾಜ್ಯ ಬಜೆಟ್ ಮಂಡನೆ ಸಂದರ್ಭದಲ್ಲಿ ರೈತರ ಪರ ಹಾಗೂ ಪ್ರವಾಹ ಪೀಡಿತರ ಪುನಶ್ಚೇತನಕ್ಕೆ ಒತ್ತು ನೀಡಲಾಗುವುದು. ಕೇಂದ್ರ ಸರಕಾರವು ಮಂಡಿಸಿರುವ ಬಜೆಟ್‌ನಲ್ಲಿ ಬೆಂಗಳೂರು ನಗರದ ರೈಲ್ವೆ ಯೋಜನೆಯಿಂದಾಗಿ ರಸ್ತೆ ಸಂಚಾರ ದಟ್ಟನೆ ಶೇ.25 ರಷ್ಟು ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಆರ್.ವಿಶ್ವನಾಥ್, ಎಂ.ಸತೀಶ್ ರೆಡ್ಡಿ, ಶಿವಣ್ಣ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಮುನಿರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







